ಹೃದಯಾಘಾತಕ್ಕೆ ತತ್ತರಿಸಿದ ಹಾಸನ; ಒಂದೇ ದಿನ ಮೂರು ಬಲಿ!

0
108

ಹಾಸನ: ಹಾಸನ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿರುವ ಹೃದಯಾಘಾತದ ಭೂತ ಮತ್ತೆ ಮೂವರನ್ನು ಬಲಿ ತೆಗೆದುಕೊಂಡಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ 38 ವರ್ಷ ವಯಸ್ಸಿನ ವ್ಯಕ್ತಿ ಸೇರಿದಂತೆ ಮೂವರು ಒಂದೇ ದಿನ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ 21 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದಂತಾಗಿದೆ.

ಹಾಸನ  ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಹೃದಯಾಘಾತದಿಂದ ಅಸುನೀಗಿದ್ದಾರೆ. ಬೇಲೂರಿನ ಜೆಪಿ‌. ಲೇಪಾಕ್ಷಿ (50) ಹಾಗೂ ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕ ಮುತ್ತಯ್ಯ (58) ಕೂಡ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.

ಲೋಹಿತ್ ಕಳೆದ 18 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯಲ್ಲಿ ಊರಿಗೆ ಬಂದಿದ್ದ ಅವರು, ಜುಲೈ 3ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳುವವರಿದ್ದರು. ದುರದೃಷ್ಟವಶಾತ್, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಹಾಸನದ ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಆಟೋ ಚಾಲಕರಾಗಿರುವ ಗೋವಿಂದ ಅವರಿಗೆ ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಆದಾಗ್ಯೂ, ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಏತನ್ಮಧ್ಯೆ, ಹಾಸನ ಜಿಲ್ಲೆಯಲ್ಲಿ ಮತ್ತು ಕರ್ನಾಟಕದ ಇತರ ಕಡೆಗಳಲ್ಲಿ ಯುವಕ ಯುವತಿಯರಲ್ಲೇ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಲು ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿಎನ್ ಮಂಜುನಾಥ್ ಮುಂದಾಗಿದ್ದಾರೆ. ಹೃದಯಘಾತ ನಿಯಂತ್ರಣಕ್ಕೆ ಸಂಬಂಧಿಸಿ ಸಿಎನ್​ ಮಂಜುನಾಥ್​ ಈಗಾಗಲೇ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಮತ್ತು ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಜೊತೆಯೂ ಚರ್ಚೆ ಮಾಡಿದ್ದಾರೆ.

ಮತ್ತೊಂದೆಡೆ, ಎದೆ ನೋವಿನಿಂದ ಬಳಲಿ ಬರುವವರಿಗೆ ಜಯದೇವ ಆಸ್ಪತ್ರೆ ಸಹಯೋಗದೊಂದಿಗೆ ಚಿಕಿತ್ಸೆ ನೀಡುವುದಕ್ಕಾಗಿ ಹಾಸನ‌ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಗಳಲ್ಲಿ ಸ್ಟೆಮಿ ಯೋಜನೆ ಜಾರಿ ಮಾಡುವಂತೆ ಜಿಲ್ಲಾ ಅರೋಗ್ಯ ಅಧಿಕಾರಿ ಡಾ. ಅನಿಲ್ ಕುಮಾರ್ ಅವರು ಆರೋಗ್ಯ ಇಲಾಖೆಗೆ ಈಗಾಗಲೇ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here