ಉಡುಪಿ: ದಿಢೀರ್ ಸುರಿದಿರುವ ಭಾರೀ ಮಳೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ಕೆಲವೆಡೆ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಅಕ್ಟೋಬರ್ 22ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸೋಮವಾರ ಕೂಡ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಇಂದು (ಮಂಗಳವಾರ) ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಸೋಮವಾರ ಯಲ್ಲೋ ಅಲರ್ಟ್ ನೀಡಲಾಗಿತ್ತು. ಈ ಜಿಲ್ಲೆಗಳಲ್ಲಿ 65 ಮಿಮೀ – 115.5 ಮಿಮೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿತ್ತು.