ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು (ಜುಲೈ 5) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮಳೆ ಚುರುಕುಗೊಂಡಿದ್ದು, ಕೆಲವೆಡೆ ನೀರು ನಿಂತಿದೆ, ರಸ್ತೆಗಳು ಜಲಾವೃತವಾಗಿವೆ. ಹಲವೆಡೆ ಭೂಕುಸಿತದ ಆತಂಕವಿದೆ. ಆಯಾ ಜಿಲ್ಲಾಡಳಿತಗಳು ನದಿ ತೀರದ ಜನರಿಗೆ ಎಚ್ಚರಿಕೆ ನೀಡಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.
ಕರಾವಳಿ ಪ್ರದೇಶದಲ್ಲಿ ಸಾಧಾರಣ ಗಾಳಿಯೊಂದಿಗೆ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಜಿಲ್ಲೆಗಳಲ್ಲಿ ಹೈ ಅಲರ್ಟ್
ಇಂದು (ಜುಲೈ 5) ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 6 ಮತ್ತು 7 ರಂದು ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಜುಲೈ 11 ರವರೆಗೆ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಬೆಳಗಾವಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೋಮವಾರವೂ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.