ಬೆಂಗಳೂರಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಎಚ್ಚರಿಕೆ – ರಾಜ್ಯದ ಹಲವು ಜಿಲ್ಲೆಗಳಲ್ಲಿ IMD ಅಲರ್ಟ್‌

0
139

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ನಿನ್ನೆ ಸಂಜೆ ನಗರದೆಲ್ಲೆಡೆ ಮಳೆಯಾಗಿದ್ದ ಹಿನ್ನೆಲೆ, ಇಂದೂ ಸಹ ಸಂಜೆ ಬಳಿಕ ಸಿಲಿಕಾನ್ ಸಿಟಿಯ ಹಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿಯೂ ಗುಡುಗು-ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.

ಗಾಳಿ ಸಹಿತ ಮಳೆ ಸಾಧ್ಯತೆ:
ಉತ್ತರ ಒಳನಾಡು ಕರ್ನಾಟಕದ ಕೆಲ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗಲಿದೆ.

ಬೆಂಗಳೂರು ಹವಾಮಾನ ವಿವರ:
ನಗರದಲ್ಲಿ ಗರಿಷ್ಠ ತಾಪಮಾನ 34°C ಹಾಗೂ ಕನಿಷ್ಠ 22°C ಇರಲಿದ್ದು, ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಬಿಸಿಲಿನ ವಾತಾವರಣ ಇರಬಹುದು. ಆದರೆ ಸಂಜೆ 5 ಗಂಟೆಯ ನಂತರ ಮಳೆ ಪ್ರಾರಂಭವಾಗುವ ಸಾಧ್ಯತೆ ಇದೆ. ಮೆಜೆಸ್ಟಿಕ್‌, ರಾಜಾಜಿನಗರ, ಜಯನಗರ, ವೈಟ್‌ಫೀಲ್ಡ್‌, ಶಿವಾಜಿನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಾತ್ರಿ ವೇಳೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ 3–5 ದಿನಗಳ ಮುನ್ಸೂಚನೆ:
ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲದಿದ್ದರೂ, ಮೇ 5ರಿಂದ 8ರವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 9ರಿಂದ 11ರವರೆಗೆ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.

ಭಾರೀ ಮಳೆ ಎಚ್ಚರಿಕೆ ನೀಡಿರುವ ಜಿಲ್ಲೆಗಳು:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here