ಮಂಗಳೂರು : ಮುಂಗಾರು ಮಳೆಯ ಕೊರತೆಯ ನಡುವೆಯೇ ರಾಜ್ಯದಲ್ಲಿ ಮತ್ತೆ ಮಳೆಯ ಚಟುವಟಿಕೆ ಚುರುಕುಗೊಳ್ಳಲಿದ್ದು, ಜೂನ್ 28ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲ ಭಾಗಗಳಲ್ಲಿ ಜೂನ್ 23ರಿಂದ 28ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
ಉತ್ತರ ಒಳನಾಡು ಭಾಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ. ಬೆಂಗಳೂರು ನಗರದಲ್ಲಿಯೂ ಮಳೆಯಾಗುವ ಸಾಧ್ಯತೆ ಇದ್ದು, ನಾಗರಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಳೆಯ ಮುನ್ಸೂಚನೆಯ ನಡುವೆಯೇ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಬಿಸಿ ಗಾಳಿ ಹಾಗೂ ತೇವಾಂಶ ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

