ಇಂದಿನಿಂದ ಮೂರು ದಿನ ಭಾರೀ ಮಳೆ ಅಬ್ಬರ: ರಾಜ್ಯದ 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!

0
78

ಮಂಗಳೂರು : ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಒಟ್ಟು ಎಂಟು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜೂನ್ 8ರಿಂದ 10ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಜೂನ್ 8 ಹಾಗೂ 9ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಅದೇ ರೀತಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜೂನ್ 10ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಲಾಗಿದೆ.

ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಿಕೆ, ನದಿ-ಹಳ್ಳಗಳಲ್ಲಿ ನೀರಿನ ಮಟ್ಟ ಏರಿಕೆ ಹಾಗೂ ಕೆಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇನ್ನು ಕರಾವಳಿ ಭಾಗದಲ್ಲಿ ಗಂಟೆಗೆ 30 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರ ಪ್ರಕ್ಷುಬ್ಧವಾಗುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಕಳೆದ 24 ಗಂಟೆಗಳಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ. ಉತ್ತರ ಕನ್ನಡದ ಕುಮಟಾ, ದಕ್ಷಿಣ ಕನ್ನಡದ ಶಕ್ತಿನಗರ ಹಾಗೂ ಕೊಡಗಿನ ಸೋಮವಾರಪೇಟೆಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ ತಲಾ 6 ಸೆಂ.ಮೀ. ಮಳೆಯಾಗಿದ್ದು, ವಿಜಯಪುರದ ಬಿ.ಬಾಗೇವಾಡಿ, ರಾಯಚೂರಿನ ಗಬ್ಬೂರು ಹಾಗೂ ಕಲಬುರಗಿಯ ಸುಲೆಪೇಟೆಯಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ. ಉತ್ತರ ಕನ್ನಡದ ಗೇರುಸೊಪ್ಪ ಮತ್ತು ಗೋಕರ್ಣ, ಧಾರವಾಡದ ಹುಬ್ಬಳ್ಳಿ ಹಾಗೂ ಕಲಘಟಗಿ, ಮಂಗಳೂರು ವಿಮಾನ ನಿಲ್ದಾಣ ಮತ್ತು ಚಿತ್ರದುರ್ಗದ ರಾಮಪುರದಲ್ಲಿ ತಲಾ 4 ಸೆಂ.ಮೀ. ಮಳೆ ದಾಖಲಾಗಿದೆ.

ಹವಾಮಾನ ಇಲಾಖೆಯು ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ತುರ್ತು ಸಂದರ್ಭಗಳಲ್ಲಿ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.

LEAVE A REPLY

Please enter your comment!
Please enter your name here