ಮಂಗಳೂರು: ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ಕೆಲವೇ ಕೆಲವೆಡೆ ಮಾತ್ರ ಭಾರಿ ಮಳೆ ಮುಂದುವರೆದಿದೆ. ಇನ್ನು ಶುಕ್ರವಾರ (ಜುಲೈ 03) ವರುಣನ ಆರ್ಭಟದ ಮುನ್ಸೂಚನೆ ಇರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕಟ್ಟಿನಿಟ್ಟಿನ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜುಲೈ 3) ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ಭಾರಿ ಮಳೆ ಹಿನ್ನೆಲೆ ಜುಲೈ 2ರಂದು ಜಿಲ್ಲೆಯಲ್ಲಿ ರಜೆ ಘೋಷಣೆ ಮಾಡಲಾಗಿತ್ತು.
ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಜಿಲ್ಲಾಡಳಿತದ ಈ ಆದೇಶವನ್ನು ಮೀರಿ ತರಗತಿಗಳನ್ನು ನಡೆಸುವುದು ಕಂಡುಬಂದರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಾನೂನು ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

