ಲಾರಿ – ಕಾರು ನಡುವೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ದುರ್ಮರಣ

0
61

ಕುಣಿಗಲ್: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲೂಕಿನ ರಾಜ್ಯ ಹೆದ್ದಾರಿ 33ರ ಟಿ.ಎಂ ರಸ್ತೆ ಹೊನ್ನೇನಹಳ್ಳಿ-ಚಿಗಣಿಪಾಳ್ಯ ಮಧ್ಯೆ ನಡೆದಿದೆ.

ಮಂಡ್ಯ ಮೂಲದ ಕುಮಾರ್ ನರಸಿಂಹಸ್ವಾಮಿ (65), ಅವರ ಪತ್ನಿ ಕೆ.ಆರ್ ಗಾಯತ್ರಿ (60) ಸೇರಿದಂತೆ ಕುಟುಂಬದ ನಾಲ್ವರು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೊಬ್ಬ ಮೃತ ಮಹಿಳೆಯ ಹೆಸರು ಕೂಡ ಗಾಯತ್ರಿ ಎಂದು ತಿಳಿದುಬಂದಿದೆ. ಉಳಿದವರ ವಿವರಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ಕುಟುಂಬದವರು ತುಮಕೂರು ಜಿಲ್ಲೆಯ ಪ್ರಸಿದ್ಧ ದೇವರಾಯನದುರ್ಗ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಮಂಡ್ಯ ಕಡೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಸಾಗುತ್ತಿದ್ದ ವೇಗದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು.

ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅಪಘಾತದ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘಟನೆ ಬಳಿಕ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನಗಳ ಉದ್ದ ಸಾಲು ನಿರ್ಮಾಣವಾಗಿತ್ತು. ಪೊಲೀಸರು ಸಂಚಾರವನ್ನು ಸುಗಮಗೊಳಿಸಿದರು.

LEAVE A REPLY

Please enter your comment!
Please enter your name here