
ಕಾರು–ರಿಕ್ಷಾ ನಡುವೆ ಡಿಕ್ಕಿ ; ಮೂವರಿಗೆ ಗಂಭೀರ ಗಾಯ
ಉಡುಪಿ : ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಬೆಂಕಿಗಾಹುತಿಯಾದ ಘಟನೆ ಸಾಲಿಗ್ರಾಮದ ಗುಂಡ್ಮಿ ಸಮೀಪ ಶನಿವಾರ ನಡೆದಿದೆ.
ಗೋಕರ್ಣದಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ದಾಟಿ ಚರಂಡಿಗೆ ಬಿದ್ದಿದೆ. ಈ ವೇಳೆ ಕಾರಿನಲ್ಲಿ ಬೆಂಕಿಯ ಕಿಡಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
