ಕಾರು–ಹಣ್ಣು ಸಾಗಾಟ ವಾಹನದ ನಡುವೆ ಭೀಕರ ಡಿಕ್ಕಿ : ಯುವಕ ಸ್ಥಳದಲ್ಲೇ ಸಾವು!

0
5

ಪುತ್ತೂರು : ಕಡಬ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪದ ನೆಕ್ಕರೆ ಬಳಿ ನವೆಂಬರ್ 14ರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಡಬದ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕಳಾರ ಕೊರಂತ್ತಿಲ್ ನಿವಾಸಿ ಮೊಹಮ್ಮದ್ ರಫೀಕ್ ಅವರ ಪುತ್ರ ತಮೀಮ್ (26) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಕಳಾರ ನಿವಾಸಿ ಖಲೀಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಕ್ಸಾನ್ ಕಾರು ಮತ್ತು ಹಣ್ಣು ಸಾಗಾಟ ವಾಹನದ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ. ಅಪಘಾತದ ತೀವ್ರತೆಗೆ ವಾಹನಗಳಲ್ಲಿದ್ದವರು ಆತಂಕಕ್ಕೊಳಗಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಘಟನೆ ನಡೆದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.