ಎಂಡಿಎಂಎ ಮಾರಾಟ ಜಾಲಕ್ಕೆ ಮಲ್ಪೆ ಪೊಲೀಸರ ಕಡಿವಾಣ ; 19 ವರ್ಷದ ಆರೋಪಿ ಸೆರೆ..!

0
69

ಉಡುಪಿ : ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು ₹1.52 ಲಕ್ಷ ಮೌಲ್ಯದ ಎಂಡಿಎಂಎ, ಸ್ಕೂಟರ್ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತನನ್ನು ಬ್ರಹ್ಮಾವರದ ಆಕಾಶವಾಣಿ ಸಮೀಪದ ಸ್ವರ್ಣ ರೆಸಿಡೆನ್ಸಿಯಲ್ಲಿ ವಾಸಿಸುತ್ತಿದ್ದ, ಮೂಲತಃ ಶಿರೂರಿನ ಮುಸ್ಲಿಂ ಮೊಹಲ್ಲಾದ ಜೆ.ಎಂ. ಕ್ರಾಸ್ ರಸ್ತೆ ನಿವಾಸಿ ಸೈಯದ್ ಮೊಹಮ್ಮದ್ ಮೆಹರಾಜ್ (19) ಎಂದು ಗುರುತಿಸಲಾಗಿದೆ.

ಉಡುಪಿ ಉಪ ವಿಭಾಗದ ಪೊಲೀಸ್ ಅಧಿಕಾರಿ ಬೆಳ್ಳಿಯಪ್ಪ ಕೆ.ಯು. ಹಾಗೂ ಮಲ್ಪೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಪೊಲೀಸ್ ತಂಡವು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿತು.

ದಾಳಿಯ ವೇಳೆ ಆರೋಪಿಯಿಂದ 1.03 ಗ್ರಾಂ ಎಂಡಿಎಂಎ, ಮಾದಕ ವಸ್ತು ಸಾಗಾಟಕ್ಕೆ ಬಳಸಲಾಗುತ್ತಿದ್ದ ಸ್ಕೂಟರ್ ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹1.52 ಲಕ್ಷ ಎಂದು ಪೊಲೀಸರು ಅಂದಾಜಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಕಾಪು, ಬ್ರಹ್ಮಾವರ, ಉಡುಪಿ ಹಾಗೂ ಮಣಿಪಾಲ ಭಾಗದ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಎಂಬ ಮಾಹಿತಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here