ಬ್ರಹ್ಮಗಿರಿಯ ಆದರ್ಶ ಸಹಕಾರ ಸಂಘಕ್ಕೆ ನವೀಕೃತ ಕಚೇರಿಯ ಕೊಡುಗೆ

0
14

ಉಡುಪಿ: ಸಹಕಾರ ವ್ಯವಸ್ಥೆಯು ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಬಡವರು, ಮಧ್ಯಮ ವರ್ಗದವರು, ರೈತರು ಹಾಗೂ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಆಸರೆಯಾಗಿ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಹೇಳಿದರು.

ಬ್ರಹ್ಮಗಿರಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನವೀಕೃತ ಕಾರ್ಯಾಲಯವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಹಕಾರ ವ್ಯವಸ್ಥೆಯು ಇಂದಿನದಲ್ಲ. ದೇಶದ ಸ್ವಾತಂತ್ರ್ಯಾನಂತರದಿಂದಲೇ ಸಹಕಾರ ಕ್ಷೇತ್ರಕ್ಕೆ ಭದ್ರ ಬುನಾದಿ ಹಾಕಲಾಗಿದೆ. ದೇಶದ ಮೊದಲ ಪ್ರಧಾನಿ ಸಹಕಾರ ಚಳವಳಿಗೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಹಕಾರ ಸಂಘಗಳು ಇಲ್ಲದಿದ್ದರೆ ಸಮಾಜದ ಬಡವರು ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಆರ್ಥಿಕ ಸಂಕಷ್ಟಗಳನ್ನು ಎದುರಿಸಬೇಕಾಗುತ್ತಿತ್ತು ಎಂದು ತಿಳಿಸಿದರು.

ಸಹಕಾರ ಸಂಘಗಳು ಕೇವಲ ದಾಖಲೆಗಳನ್ನು ಆಧರಿಸಿ ವ್ಯವಹರಿಸುವುದಿಲ್ಲ. ಬದಲಾಗಿ ವ್ಯಕ್ತಿಯ ಹಿನ್ನೆಲೆ ಹಾಗೂ ಆರ್ಥಿಕ ಪರಿಸ್ಥಿತಿಯನ್ನು ಅರಿತು ನೆರವಿಗೆ ಮುಂದಾಗುತ್ತವೆ. ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ನೀಡುವುದರೊಂದಿಗೆ ರೈತರು ಹಾಗೂ ವ್ಯಾಪಾರಿಗಳಿಗೆ ಸಂಕಷ್ಟದ ಸಮಯದಲ್ಲಿ ಬೆಂಬಲವಾಗಿ ನಿಲ್ಲುತ್ತವೆ. ಆದ್ದರಿಂದ ಸಹಕಾರ ಸಂಘಗಳಿಗೆ ಇನ್ನಷ್ಟು ಶಕ್ತಿ ತುಂಬುವ ಅಗತ್ಯವಿದೆ ಎಂದರು.

ಆದರ್ಶ ಸಹಕಾರಿ ಸಂಘವು ಕಳೆದ 39 ವರ್ಷಗಳಿಂದ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಜನಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ. ಹಿರಿಯರು ಹಾಕಿಕೊಟ್ಟ ಭದ್ರ ಬುನಾದಿಯನ್ನು ಮುಂದುವರಿಸಿಕೊಂಡು ಹೋಗುವ ಮೂಲಕ ಸಂಘವು ಮುಂದಿನ ಪೀಳಿಗೆಗೂ ಆದರ್ಶ ಸಂಸ್ಥೆಯಾಗಿ ಬೆಳೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶುಭ ಹಾರೈಸಿದರು. ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹಾಗೂ ಉದ್ಯಮಿ ಪುರುಷೋತ್ತಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕರಾದ ಕೃಷ್ಣಮೂರ್ತಿ ಆಚಾರ್ಯ, ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫಿಕ್ ಖಾನ್ ಸಾಹೇಬ್, ರವಿಪ್ರಕಾಶ್, ಅನಂತ ನಾಯ್ಕ್, ಸುಲೋಚನ ದಾಮೋದರ್ ಹಾಗೂ ವಿನಯ ಪ್ರಕಾಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಮಲಶಿಲೆ ಯಕ್ಷಗಾನ ಮೇಳದ ಪ್ರಧಾನ ಭಾಗವತ ಮಧುಕರ ಹೆಗ್ಡೆ ಮಡಾಮಕ್ಕಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ಜಯನ್ ಮಲ್ಪೆ ವಂದಿಸಿದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.