11 ಜಾನುವಾರುಗಳ ಅಕ್ರಮ ಸಾಗಾಟ ಪ್ರಕರಣ: ಪರಾರಿಯಾಗಿದ್ದ ಇಬ್ಬರು ಪೊಲೀಸರ ವಶಕ್ಕೆ

0
48

ಪುತ್ತೂರು : ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕೇರಳದ ಕಡೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಇಬ್ಬರನ್ನು ಸಂಪ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇರೆಗೆ ಆರ್ಯಾಪು ನಿವಾಸಿ ಶಿವಪ್ರಸಾದ್ ಎಂಬಾತನ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 5ರಂದು ಬೆಳಗ್ಗೆ ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೊಬ್ಬ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.

ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪ್ರಕರಣದಲ್ಲಿ ಪರಾರಿಯಾಗಿದ್ದವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಮುಡಿಪು ನಿವಾಸಿ ಮಾಶಿಕ್ ಹಾಗೂ ಬಂಟ್ವಾಳದ ಪೇರಮುಗೇರು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಶಿವಪ್ರಸಾದ್‌ನ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.