ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನ ಕಂಪ್ಯೂಟರ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‌ರೂಮ್ ಗಳ ಉದ್ಘಾಟನೆ

0
8

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ನಿರ್ಮಿಸಲಾದ ಕಂಪ್ಯೂಟರ್ ಸೈನ್ಸ್ ಲ್ಯಾಬ್ ಹಾಗೂ ಸ್ಮಾರ್ಟ್ ಕ್ಲಾಸ್‌ರೂಮ್‌ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಆಧುನಿಕ ತಂತ್ರಜ್ಞಾನವನ್ನು ಶಿಕ್ಷಣದೊಂದಿಗೆ ಸಮನ್ವಯಗೊಳಿಸಿ ವಿದ್ಯಾರ್ಥಿಗಳ ಜ್ಞಾನ ಹಾಗೂ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಸೌಲಭ್ಯಗಳನ್ನು ನಿರ್ಮಿಸಲಾಗಿದೆ.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣ ಕುಮಾರ್ ಶೆಟ್ಟಿ ಕಡಬ ಅವರು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಮಾತನಾಡಿ, ಬುದ್ಧಿಶಕ್ತಿ ಹಾಗೂ ಜ್ಞಾನಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನದೊಂದಿಗೆ ಹೆಜ್ಜೆ ಹಾಕಲು ನೂತನ ಕಂಪ್ಯೂಟರ್ ಲ್ಯಾಬ್ ಸಹಕಾರಿಯಾಗಲಿದೆ ಎಂದು ಹೇಳಿದರು. ತಂತ್ರಜ್ಞಾನವನ್ನು ಕೇವಲ ಮನರಂಜನೆಗಾಗಿ ಬಳಸದೆ, ಜ್ಞಾನಾರ್ಜನೆ, ಸಂಶೋಧನೆ ಹಾಗೂ ಸೃಜನಶೀಲತೆಯ ಬೆಳವಣಿಗೆಗೆ ಬಳಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಸ್ಮಾರ್ಟ್ ಕ್ಲಾಸ್‌ರೂಮ್‌ಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್, ಕಾಲಕಾಲಕ್ಕೆ ಬದಲಾಗುತ್ತಿರುವ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಹೇಳಿದರು. ಆಧುನಿಕ ಶಿಕ್ಷಣದಲ್ಲಿ ಕಂಪ್ಯೂಟರ್ ಹಾಗೂ ಡಿಜಿಟಲ್ ತಂತ್ರಜ್ಞಾನಗಳು ಪ್ರಮುಖ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಲು, ಹೊಸ ವಿಷಯಗಳನ್ನು ಅನ್ವೇಷಿಸಲು ಹಾಗೂ ವಿವಿಧ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಲು ಕಂಪ್ಯೂಟರ್ ಲ್ಯಾಬ್ ಉತ್ತಮ ವೇದಿಕೆಯಾಗಲಿದೆ ಎಂದು ಅವರು ನುಡಿದರು.

ಕಾರ್ಯಕ್ರಮದ ಇನ್ನೋರ್ವ ಅತಿಥಿ ಪುತ್ತೂರಿನ ದಿ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಹಸಂಸ್ಥಾಪಕರಾದ ಶರತ್ ಶ್ರೀನಿವಾಸ್ ಮಾತನಾಡಿ, ಶಿಕ್ಷಣ ಸಂಪೂರ್ಣವಾಗಬೇಕಾದರೆ ಕಲಿತ ಜ್ಞಾನವನ್ನು ಪ್ರಾಯೋಗಿಕವಾಗಿ ಅನ್ವಯಿಸುವುದು ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟರು. ಕೇವಲ ಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಕಲಿತ ವಿಷಯಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ನೈಜ ಜ್ಞಾನವನ್ನು ಪಡೆಯಲು ಸಾಧ್ಯ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ನಿರ್ಮಾಣಕ್ಕೆ ಸಹಕರಿಸಿದ ಪ್ರವೀಣ್ ಎನ್. ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕರಾದ ರವೀಂದ್ರ ಪಿ. ಹಾಗೂ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ. ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರು, ವಸತಿ ನಿಲಯಗಳ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಪ್ರಾಂಶುಪಾಲರು, ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉಪನ್ಯಾಸಕರಾದ ಶ್ಯಾಮ್ ಪ್ರಸಾದ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಉಪನ್ಯಾಸಕಿ ಅಕ್ಷತಾ ಜಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿದ್ಯಾರ್ಥಿನಿ ಹಂಸಿನಿ ಪ್ರಾರ್ಥಿಸಿದರು.