ಪುತ್ತೂರು: ನಗರದ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸ್ಮಾರ್ಟ್ ಕ್ಯಾಂಪಸ್ ಪರಿಕಲ್ಪನೆಯಡಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಕಂಪ್ಯೂಟರ್ ಪ್ರಯೋಗಾಲಯ ಹಾಗೂ ಸ್ಮಾರ್ಟ್ ಕ್ಲಾಸ್‌ರೂಮ್‌ಗಳ ಉದ್ಘಾಟನಾ ಕಾರ್ಯಕ್ರಮ ಆಗಸ್ಟ್ 31ರಂದು ನಡೆಯಿತು.
ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಪರಿಣಾಮಕಾರಿ ಬೋಧನೆ ಹಾಗೂ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ಪ್ರಯೋಗಾಲಯ ಮತ್ತು ಸ್ಮಾರ್ಟ್ ಕ್ಲಾಸ್‌ರೂಮ್‌ಗಳನ್ನು ನಿರ್ಮಿಸಲಾಗಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ತರಗತಿ ಕೊಠಡಿಗಳು ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ತಂತ್ರಜ್ಞಾನಾಧಾರಿತ ಕಲಿಕಾ ವಾತಾವರಣವನ್ನು ಒದಗಿಸಲಿವೆ.
ಕಂಪ್ಯೂಟರ್ ಸೈನ್ಸ್ ವಿಷಯದ ತರಗತಿಗಳ ಜೊತೆಗೆ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಹಾಗೂ ನೀಟ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವ ಉದ್ದೇಶವೂ ನೂತನ ಕಂಪ್ಯೂಟರ್ ಪ್ರಯೋಗಾಲಯದ ನಿರ್ಮಾಣದ ಹಿಂದಿದೆ. ಜೆಇಇ ಹಾಗೂ ನೀಟ್ ಪರೀಕ್ಷೆಗಳು ಪ್ರಸ್ತುತ ಕಂಪ್ಯೂಟರ್ ಬೇಸ್ಡ್ ಟೆಸ್ಟ್ (CBT) ಮಾಧ್ಯಮದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾದರಿಯ ಅನುಭವ ನೀಡಲು ಪ್ರಯೋಗಾಲಯದಲ್ಲಿ ವಿಶೇಷ ಸಾಫ್ಟ್‌ವೇರ್ ವ್ಯವಸ್ಥೆ ಅಳವಡಿಸಲಾಗಿದೆ.
ನೂತನ ಪ್ರಯೋಗಾಲಯದಲ್ಲಿ ಏಕಕಾಲದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಅಣಕು ಪರೀಕ್ಷೆಗಳನ್ನು ನಡೆಸಲು ಹಾಗೂ ತರಗತಿಗಳನ್ನು ಆಯೋಜಿಸಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಪರೀಕ್ಷೆಗಳ ಮಾದರಿ, ಸಮಯ ನಿರ್ವಹಣೆ ಹಾಗೂ ಕಂಪ್ಯೂಟರ್ ಆಧಾರಿತ ಪರೀಕ್ಷಾ ವ್ಯವಸ್ಥೆಯ ಬಗ್ಗೆ ಪ್ರಾಯೋಗಿಕ ಅನುಭವ ಪಡೆಯಲು ಸಹಕಾರಿಯಾಗಲಿದೆ.
ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ ಕಡಬ ಅವರು ನೂತನ ಕಂಪ್ಯೂಟರ್ ಪ್ರಯೋಗಾಲಯವನ್ನು ಉದ್ಘಾಟಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ನಿಕಟಪೂರ್ವ ಕಾರ್ಯದರ್ಶಿಗಳಾದ ಡಾ. ಕೆ.ಎಂ. ಕೃಷ್ಣ ಭಟ್ ಹಾಗೂ ಪುತ್ತೂರಿನ ದಿ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಹಸಂಸ್ಥಾಪಕರಾದ ಶರತ್ ಶ್ರೀನಿವಾಸ್ ಅವರು ನೂತನ ಸ್ಮಾರ್ಟ್ ಕ್ಲಾಸ್‌ರೂಮ್‌ಗಳನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪೋಷಕರು, ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

