ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು, ದಕ್ಷಿಣ ಕನ್ನಡ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು, ಸಜೀಪ ಮೂಡ ಇದರ ಜಂಟಿ ಆಶ್ರಯದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ 2026-27ಕ್ಕೆ ಶುಕ್ರವಾರ ಮೂಡುಬಿದಿರೆಯ ಸ್ವರಾಜ್ ಮೈದಾನದ ತಾಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಸರ್ಕಾರಿ ಪದವಿಪೂರ್ವ ಕಾಲೇಜು ಸಜೀಪ ಮೂಡದ ಪ್ರಾಂಶುಪಾಲೆ ಡಾ. ಜೈರಾ ಬಿ.ಎನ್.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಕೇಶ ಶ್ರೀಕಾಂತ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ. ಸುಬ್ರಹ್ಮಣ್ಯ ಭಟ್ ಶುಭ ಹಾರೈಸಿ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಒಗ್ಗಟ್ಟು, ಪರಿಶ್ರಮ, ಏಕಾಗ್ರತೆ ಹಾಗೂ ಶಾರೀರಿಕ ವ್ಯಾಯಾಮದೊಂದಿಗೆ ಆರೋಗ್ಯ ವೃದ್ಧಿಯಾಗುತ್ತದೆ. ಕ್ರೀಡೆಯು ಕಾಯಾ, ವಾಚಾ, ಮನಸಾ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ ಎಂದರು.
ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸಂಯಮ, ಪ್ರಾಮಾಣಿಕತೆ ಹಾಗೂ ಏನನ್ನಾದರೂ ಸಾಧಿಸಬೇಕೆಂಬ ಛಲವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಉತ್ತಮ ಕ್ರೀಡಾಪಟುಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು.
ಉಪಪ್ರಾಂಶುಪಾಲೆ ಜ್ಯೋತಿ ಕುಮಾರಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಊರು, ಹೆತ್ತವರು ಹಾಗೂ ವಿದ್ಯಾಸಂಸ್ಥೆಗೆ ಉತ್ತಮ ಹೆಸರು ತರುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಹಿತವಚನ ನೀಡಿದರು.
ಮಂಗಳೂರು ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ಶುಭ ಹಾರೈಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ನಿತಿನ್, ಅರಸ, ವಿಶ್ವನಾಥ್ ಕೊಟ್ಟಾರಿ ಉಪಸ್ಥಿತರಿದ್ದರು.
ಉಪನ್ಯಾಸಕಿ ಗಾಯತ್ರಿ ಸ್ವಾಗತಿಸಿದರು. ಉಪನ್ಯಾಸಕಿ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಭಾರತಿ ವಂದಿಸಿದರು.

