ಉಡುಪಿ : ಉಡುಪಿ ಸಮೀಪದ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೈಪ್ ದುರಸ್ತಿಗಾಗಿ ಅಗೆದ ರಸ್ತೆಯನ್ನು ಎರಡು ತಿಂಗಳು ಕಳೆದರೂ ಸಮರ್ಪಕವಾಗಿ ದುರಸ್ತಿ ಮಾಡದಿರುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಜೀವಭಯದಲ್ಲೇ ಸಂಚರಿಸುವಂತಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಆರೋಪಿಸಿದ್ದಾರೆ.
ಹೋಂಡಾ ಶೋರೂಮ್ ಸಮೀಪ ಹಾಗೂ ಹುಂಡೈ ಶೋರೂಮ್ ಎದುರಿನ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಅಗೆದ ರಸ್ತೆಗೆ ಅರ್ಧಂಬರ್ಧ ತೇಪೆ ಹಾಕಿ ಬಿಟ್ಟಿರುವುದರಿಂದ ಮಳೆಗಾಲದಲ್ಲಿ ಮತ್ತು ರಾತ್ರಿ ವೇಳೆ ರಸ್ತೆ ಸ್ಪಷ್ಟವಾಗಿ ಕಾಣದೆ ಅಪಘಾತಗಳು ಸಂಭವಿಸುತ್ತಿವೆ ಎಂದು ಅವರು ತಿಳಿಸಿದ್ದಾರೆ.

ಈ ಸ್ಥಳದಲ್ಲಿ ಈಗಾಗಲೇ ಹಲವು ಅಪಘಾತಗಳು ನಡೆದಿದ್ದು, ಬ್ಯಾರಿಕೇಡ್‌ಗಳನ್ನು ಅಳವಡಿಸಿದರೂ ಶಾಶ್ವತ ಪರಿಹಾರ ಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಜಿಲ್ಲಾಡಳಿತ, ನಗರಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ರಸ್ತೆ ಸಂಪೂರ್ಣ ಡಾಮರೀಕರಣ ಮಾಡಿ ಸಮತಟ್ಟುಗೊಳಿಸುವುದರ ಜೊತೆಗೆ ಬ್ಯಾರಿಕೇಡ್ ತೆರವುಗೊಳಿಸಿ ವಾಹನ ಸವಾರರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸತೀಶ್ ಪೂಜಾರಿ ಕೀಳಂಜೆ ಆಗ್ರಹಿಸಿದ್ದಾರೆ.

