ಕೋವಿಡ್ ಮತ್ತೆ ವಾಪಸ್ ಬರುತ್ತಿದೆಯೇ?

0
33

ರಾಜ್ಯದಲ್ಲಿ ಮತ್ತೆ ಎಚ್ಚರಿಕೆ ಅಗತ್ಯವೇ?

ಬೆಂಗಳೂರು : ನೆರೆಯ ಆಂಧ್ರಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಸೋಂಕು ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದ್ದು, ರಾಜ್ಯದಲ್ಲಿ ಇದುವರೆಗೆ 32 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಇದರಿಂದ ಸಾರ್ವಜನಿಕರಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಆರೋಗ್ಯ ಇಲಾಖೆಯ ಮಾಹಿತಿಯಂತೆ, ಜೂನ್ ತಿಂಗಳಲ್ಲಿ ರಾಜ್ಯದಲ್ಲಿ ಕೇವಲ 14 ಕೋವಿಡ್ ಪ್ರಕರಣಗಳು ದಾಖಲಾಗಿದ್ದರೆ, ಜುಲೈ ತಿಂಗಳ ಮೊದಲ ಹತ್ತು ದಿನಗಳಲ್ಲೇ 32 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು 193 ಶಂಕಿತ ವ್ಯಕ್ತಿಗಳ ಕೋವಿಡ್ ಪರೀಕ್ಷೆ ನಡೆಸಿದ ವೇಳೆ ಈ ಸೋಂಕು ದೃಢಪಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಆಯುಕ್ತ ಗುರುದತ್ ಹೆಗಡೆ, ಆಂಧ್ರಪ್ರದೇಶದ ಕಡಪಾದಲ್ಲಿ ವರದಿಯಾಗಿರುವ ಸಾವಿನ ಪ್ರಕರಣಗಳು ಸದ್ಯ ಶಂಕಿತವಾಗಿದ್ದು, ಈ ಸಂಬಂಧ ಅಲ್ಲಿನ ಸರ್ಕಾರದೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಪತ್ತೆಯಾಗಿರುವ ಹೆಚ್ಚಿನ ಸೋಂಕಿತರಿಗೆ ಯಾವುದೇ ಗಂಭೀರ ರೋಗಲಕ್ಷಣಗಳು ಕಂಡುಬಂದಿಲ್ಲ. ಶಸ್ತ್ರಚಿಕಿತ್ಸೆಗೆ ಮುನ್ನ ನಡೆಸುವ ಕಡ್ಡಾಯ ಕೋವಿಡ್ ಪರೀಕ್ಷೆಯ ವೇಳೆ ಸೋಂಕು ಪತ್ತೆಯಾಗುತ್ತಿರುವ ಪ್ರಕರಣಗಳೇ ಹೆಚ್ಚಾಗಿವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಪರಿಸ್ಥಿತಿಯನ್ನು ಆರೋಗ್ಯ ಇಲಾಖೆ ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಸದ್ಯ ಆತಂಕಪಡುವಂತಹ ಪರಿಸ್ಥಿತಿ ಇಲ್ಲ. ಸಾರ್ವಜನಿಕರು ಅನಗತ್ಯ ವದಂತಿಗಳಿಗೆ ಕಿವಿಗೊಡದೆ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ, ಆರೋಗ್ಯ ಇಲಾಖೆಯ ಸೂಚನೆಗಳನ್ನು ಅನುಸರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.