ಅಮ್ಮುಂಜೆ ಸೆಕ್ರೇಡ್ ಹಾರ್ಟ್ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ

0
16

ಅಮ್ಮುಂಜೆ : ಅಮ್ಮುಂಜೆಯ ಸೆಕ್ರೇಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷರು, ಸಮಾಜ ಸೇವಕರು ಹಾಗೂ ಶಾಲೆಯ ಉಳಿವಿಗಾಗಿ ಹೋರಾಟ ನಡೆಸಿದ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಆಗಮಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಗೌರವ ಶಿಕ್ಷಕಿಯರಾದ ಉಷಾ, ಮಮತಾ, ಸುಜಾತಾ ಹಾಗೂ ಸಂಗೀತ ಅವರನ್ನು ಮುಖ್ಯ ಅತಿಥಿ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ಉಡುಗೊರೆ ನೀಡಿ ಗೌರವಿಸಿದರು. ಶಿಕ್ಷಕರ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಿದ ವಿದ್ಯಾರ್ಥಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಗೌರವ ಶಿಕ್ಷಕಿ ಉಷಾ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಆಶಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ 6ನೇ ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನೆರವೇರಿತು. ಬಳಿಕ ಮುಖ್ಯ ಅತಿಥಿ ಹಾಗೂ ಶಿಕ್ಷಕ ವೃಂದದವರು ದೀಪ ಬೆಳಗಿಸಿದರು. ವಿದ್ಯಾರ್ಥಿ ಮೋಕ್ಷ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ತರುಣ್ ಸ್ವಾಗತಿಸಿದರು.

ಮುಖ್ಯ ಅತಿಥಿ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಮಾತನಾಡಿ, ಶಿಕ್ಷಕರ ದಿನಾಚರಣೆಯ ಮಹತ್ವ, ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮತ್ತು ಶಿಕ್ಷಣದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಉಳಿವಿಗಾಗಿ ನಡೆದ ಹೋರಾಟದ ಸಂದರ್ಭಗಳನ್ನು ಸ್ಮರಿಸಿದ ಅವರು, ಶಾಲೆಯ ಶೈಕ್ಷಣಿಕ ಬೆಳವಣಿಗೆ ಹಾಗೂ ಮುಂದಿನ ಪ್ರಗತಿಗಾಗಿ ಶಿಕ್ಷಕರು, ಪೋಷಕರು, ಹಳೆ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಒಗ್ಗೂಡಿ ಸಹಕಾರ ನೀಡಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳ ಪರವಾಗಿ 6ನೇ ತರಗತಿಯ ನಿಶಾಂತ್ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು. ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ ಅವರು, ತಮ್ಮ ಜೀವನದಲ್ಲಿ ಶಿಕ್ಷಕರು ನೀಡುವ ಮಾರ್ಗದರ್ಶನದ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿ ಪೃಥಮ್ ವಂದನಾರ್ಪಣೆ ಸಲ್ಲಿಸಿದರು.

ಶಿಕ್ಷಕರಿಗೆ ಗೌರವ ಸಲ್ಲಿಸುವುದರೊಂದಿಗೆ ವಿದ್ಯಾರ್ಥಿಗಳೇ ಕಾರ್ಯಕ್ರಮವನ್ನು ಆಯೋಜಿಸಿ ನಿರ್ವಹಿಸಿರುವುದು ವಿಶೇಷವಾಗಿತ್ತು. ಶಿಕ್ಷಕರ ಮೇಲಿನ ಗೌರವ, ಕೃತಜ್ಞತೆ ಹಾಗೂ ಅವರ ಸೇವೆಯನ್ನು ಸ್ಮರಿಸುವ ಮೂಲಕ ನಡೆದ ಕಾರ್ಯಕ್ರಮವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಲ್ಲರಿಗೂ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.