ಮೈರ್ಪಾಡಿ ಶ್ರೀ ವೆಂಕಟ್ರಮಣ ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

0
5

ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ – ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಕುಳಾಯಿ : ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೆ ಒಳಪಟ್ಟ ಅನುದಾನಿತ ಶ್ರೀ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಭಾರತದ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಶ್ರೀ ಎಂ. ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್ (ರಿ.) ಕುಳಾಯಿ, ಸುಮತಿ ಫೌಂಡೇಶನ್ ಹಾಗೂ ಶಿಕ್ಷಕ-ರಕ್ಷಕ ಸಂಘದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು. ಶಾಲಾ ನಾಯಕ ಕು. ಶಾಧಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಎಂ. ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ. ರಮೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಶ್ರೀಧರ್, ಟ್ರಸ್ಟ್‌ನ ಸದಸ್ಯ ಎಂ. ನರೇಂದ್ರ, ವಿದ್ಯಾದಾಯಿನೀ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶ್ರೀನಿವಾಸ ಕುಳಾಯಿ, ದೇವಿಕಾ ಪವನ್ ಮೈರ್ಪಾಡಿ ಕುಳಾಯಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ್.ವಿ. ಉಪಸ್ಥಿತರಿದ್ದು ಮಕ್ಕಳ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ ಶುಭ ಹಾರೈಸಿದರು.

ಮಕ್ಕಳ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಹುಮಾನಗಳು ಹಾಗೂ ಸಿಹಿತಿಂಡಿ, ಪಾಯಸದ ವ್ಯವಸ್ಥೆಯನ್ನು ಕಾರ್ಯಕ್ರಮದ ಸಂಯೋಜಕರಾದ ಎಂ. ಶಂಕರನಾರಾಯಣಯ್ಯ ಚಾರಿಟೇಬಲ್ ಟ್ರಸ್ಟ್ ಮತ್ತು ಅತಿಥಿ ದೇವಿಕಾ ಪವನ್ ಮೈರ್ಪಾಡಿ ಅವರು ಒದಗಿಸಿದರು.

ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳೇ ನಿರೂಪಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳ ಪೋಷಕರು ಹಾಗೂ ಇತರರು ಭಾಗವಹಿಸಿದ್ದರು. ಕಾರ್ಯಕ್ರಮದ ಬಳಿಕ ಕಲಾಕುಂಭ ಕುಳಾಯಿ ಇದರ ನಿರ್ದೇಶಕ ನಾಗೇಶ್ ಕುಲಾಲ್ ಅವರು ನೀಡಿದ ಸಿಹಿತಿಂಡಿಯನ್ನು ಮಕ್ಕಳಿಗೆ ವಿತರಿಸಲಾಯಿತು.