ಪುತ್ತೂರು : ಕಂಬಳ ಕ್ಷೇತ್ರದ ಖ್ಯಾತ ವೀಕ್ಷಕ ವಿವರಣೆಗಾರ, ಕಾಂಗ್ರೆಸ್ ಮುಖಂಡ ಹಾಗೂ ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯ ನಿರಂಜನ್ ರೈ ಮಠಂತಬೆಟ್ಟು (60) ಅವರು ( ಇಂದು ) ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಅವರ ಅಕಾಲಿಕ ನಿಧನ ಕಂಬಳ, ಸಾಮಾಜಿಕ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಪುತ್ತೂರಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಭೂನ್ಯಾಯ ಮಂಡಳಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಿದ್ದ ವೇಳೆ ಅವರಿಗೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿ ಕುಸಿದುಬಿದ್ದರು ಎನ್ನಲಾಗಿದೆ. ತಕ್ಷಣವೇ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.
ನಿರಂಜನ್ ರೈ ಮಠಂತಬೆಟ್ಟು ಅವರು ಕಂಬಳ ಲೋಕದಲ್ಲಿ ತಮ್ಮ ವಿಶಿಷ್ಟ ತುಳು ವೀಕ್ಷಕ ವಿವರಣೆ, ಸ್ಪಷ್ಟ ಉಚ್ಚಾರಣೆ ಹಾಗೂ ಮನಮೋಹಕ ನಿರೂಪಣೆಯ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿದ್ದರು. ಅವರ ಧ್ವನಿ ಮತ್ತು ಶೈಲಿ ಕಂಬಳಾಭಿಮಾನಿಗಳ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿದ್ದು, ಅನೇಕ ಕಂಬಳ ಕೂಟಗಳಲ್ಲಿ ಅವರ ನಿರೂಪಣೆ ಪ್ರಮುಖ ಆಕರ್ಷಣೆಯಾಗಿತ್ತು.
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೋಡಿಂಬಾಡಿ ಮಹಿಷಮರ್ದಿನಿ ದೇವಳದ ಆಡಳಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಹಾಗೂ ಬಂಟರ ಸಂಘದ ಕ್ರಿಯಾಶೀಲ ಸದಸ್ಯರಾಗಿ ಸೇವೆ ಸಲ್ಲಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದರು.

