ಉಡುಪಿ: ಶಾಲೆಯಲ್ಲಿ ಮಕ್ಕಳಿಗೆ ನೈತಿಕತೆಯ ಪಾಠ ಹೇಳಬೇಕಾದ ಶಿಕ್ಷಕಿಯೇ ವೇಶ್ಯಾವಾಟಿಕೆ ಜಾಲದ ಪ್ರಕರಣದಲ್ಲಿ ಬಂಧಿತಳಾಗಿರುವುದು ಸುದ್ದಿಯಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ಮನೆಯಲ್ಲಿಯೇ ವೇಶ್ಯಾವಾಟಿಕೆ ನಡೆಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಶಿಕ್ಷಕಿ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ನಿವಾಸಿ, ಸರ್ಕಾರಿ ಶಾಲಾ ಶಿಕ್ಷಕಿ ಪ್ರಮೀಳಾ ವಿಜಯ್ ಕುಮಾರ್ ಹಾಗೂ ಭರತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿತ ಶಿಕ್ಷಕಿ ಈದು ಗ್ರಾಮದ ಹೊಸ್ಮಾರು ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಶಿಕ್ಷಕಿಯ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ವೇಶ್ಯಾವಾಟಿಕೆ ನಡೆಸುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ. ಒಬ್ಬ ಯುವತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.