
ಅ.18ರಂದು ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ
ಕಾಸರಗೋಡು : ಖ್ಯಾತ ಕವಿ, ಸಾಹಿತಿ ಹಾಗೂ ಬೆಂಗಳೂರು ರಾಮನಗರ ಕ್ಷೇತ್ರದ ನಿಕಟಪೂರ್ವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಡಿ. ಮುನಾಫ್ ಅವರನ್ನು 2026ನೇ ಸಾಲಿನ **‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ’**ಗೆ ಆಯ್ಕೆ ಮಾಡಲಾಗಿದೆ.
ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ನೇತೃತ್ವದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ–ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ಅ.11ರಿಂದ 20ರವರೆಗೆ ನಡೆಯಲಿರುವ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ರ ಅಂಗವಾಗಿ ಅ.18ರಂದು ಬೆಳಗ್ಗೆ 11 ಗಂಟೆಗೆ ಕಾಸರಗೋಡು ದಸರಾ ಕವಿ ಸಮ್ಮೇಳನ ನಡೆಯಲಿದೆ. ಈ ಸಂದರ್ಭದಲ್ಲಿ ಡಾ. ಎಂ.ಡಿ. ಮುನಾಫ್ ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.
ಸಾಹಿತ್ಯ ಸಂಘಟಕ ಬಿ. ಶ್ರೀನಿವಾಸ್ ಬಹಾದ್ದೂರ್ ಅವರ ಸರ್ವಾಧ್ಯಕ್ಷತೆಯಲ್ಲಿ ಕವಿ ಸಮ್ಮೇಳನ ನಡೆಯಲಿದ್ದು, ಚುಟುಕು ಬ್ರಹ್ಮ ಹಾಗೂ ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಡಾ. ಎಂ.ಜಿ.ಆರ್. ಅರಸ್, ಮೈಸೂರು ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಮೈಸೂರಿನ ಖ್ಯಾತ ಕವಿ ಹಾಗೂ ಸಾಹಿತ್ಯ ರತ್ನ ಜಯಪ್ಪ ಹೊನ್ನಾಳಿ (ಜಯ ಕವಿ ಮೈಸೂರು) ಅವರ ಅಧ್ಯಕ್ಷತೆಯಲ್ಲಿ ಕಾಸರಗೋಡು ದಸರಾ ಕವಿಗೋಷ್ಠಿ ನಡೆಯಲಿದೆ.
ರಾಷ್ಟ್ರಮಟ್ಟದ 75 ಮಂದಿ ಕವಿಗಳು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ 21 ಮಂದಿ ಕವಿಗಳಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ದಸರಾ ಸಂಚಾಲಕ ಹಾಗೂ ಕನ್ನಡ ಭವನದ ಸಂಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಮತ್ತು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ–ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ. ಎಂ.ಡಿ. ಮುನಾಫ್ ಅವರ ಸಾಹಿತ್ಯ ಸೇವೆ ಹಾಗೂ ಕನ್ನಡ ಕ್ಷೇತ್ರದಲ್ಲಿನ ಕೊಡುಗೆಯನ್ನು ಪರಿಗಣಿಸಿ ಈ ರಾಷ್ಟ್ರೀಯ ಗೌರವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
