ಕಾರ್ಕಳ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪುತ್ತೂರಿನ ಕಿಶೋರ್ ಕುಮಾರ್ ಬೊಟ್ಯಾಡಿ ಜಯಭೇರಿ ಸಾಧಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಸಂಸದರಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು. ಇಂದು (ಅ.24) ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಿತು. ಕಿಶೋರ್ ಕುಮಾರ್ ಅಧಿಕ ಮತ ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿ ಅನ್ವರ್ ಸಾದತ್ ಬಜತ್ತೂರು ಹಾಗೂ ಪಕ್ಷೇತರ ಅಭ್ಯರ್ಥಿ ದಿನಕರ್ ಅವರನ್ನು ಸೋಲಿಸಿ 1697 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾದ ದ.ಕ. ಜಿಲ್ಲಾಧ್ಯಕ್ಷ, ಯುವ ಮೋರ್ಚಾದ ಕರ್ನಾಟಕ ರಾಜ್ಯ ಉಪಾಧ್ಯಕ್ಷ, ಮೆಸ್ಕಾಂ ನಾಮನಿರ್ದೇಶಿತ ಸದಸ್ಯರಾಗಿದ್ದ ಕಿಶೋರ್ ಕುಮಾರ್ ಬಿಜೆಪಿ ದ.ಕ. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ದ.ಕ. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.