ಕೆಯ್ಯರು : ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆಗಸ್ಟ್ 15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ ಅಭಿಲಾಷ್ (24) ಎಂದು ಗುರುತಿಸಲಾಗಿದೆ.
ಮಾಹಿತಿ ಪ್ರಕಾರ, ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅಭಿಲಾಷ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಹಾಗೂ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದರು. ಅಪಘಾತದ ಮಾಹಿತಿ ತಿಳಿದು ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಭಿಲಾಷ್ ಅವರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

