ನಗರ ಕೇಂದ್ರದ ಶಾಖಾ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ, ಸದಸ್ಯತ್ವ ನೋಂದಣಿ ಅಭಿಯಾನ
ಉಡುಪಿ : ನಗರದ ಕವಿ ಮುದ್ದಣ ಮಾರ್ಗದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಗರ ಕೇಂದ್ರದ ಶಾಖಾ ಗ್ರಂಥಾಲಯದ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಇಂದಿನ ಕಾಲಘಟ್ಟದಲ್ಲಿ ಗ್ರಂಥಾಲಯಗಳ ಅಗತ್ಯತೆ ಹಾಗೂ ಓದುವ ಹವ್ಯಾಸದ ಮಹತ್ವವನ್ನು ವಿವರಿಸಿದರು. ಜ್ಞಾನ ಸಂಪಾದನೆಗೆ ಗ್ರಂಥಾಲಯಗಳು ಮಹತ್ವದ ಕೇಂದ್ರಗಳಾಗಿವೆ ಎಂದು ತಿಳಿಸಿದರು.
ಗ್ರಂಥಾಲಯ ಸಹಾಯಕರಾದ ಸುನೀತಾ ಬಿ. ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನವೆಂಬರ್ 14 ರಿಂದ 20 ರವರೆಗೆ ನಡೆಯಲಿರುವ ಪುಸ್ತಕ ಪ್ರದರ್ಶನ ಹಾಗೂ ಗ್ರಂಥಾಲಯ ಸದಸ್ಯತ್ವ ನೋಂದಣಿ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ, ಪದ್ಮಶ್ರೀ ಪುರಸ್ಕೃತ ಡಾ. ಎಸ್. ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವಸಾಹಿತಿ ತಾರಾನಾಥ್ ಮೇಸ್ತ ಶಿರೂರು ಮಾತನಾಡಿ, ಪುಸ್ತಕ ಓದುವ ಹವ್ಯಾಸವು ಮನುಷ್ಯನ ಜ್ಞಾನವಿಸ್ತಾರಕ್ಕೆ ಮಾತ್ರವಲ್ಲದೆ, ಚಿಂತನಾ ಶಕ್ತಿ, ಭಾಷಾ ಕೌಶಲ ಹಾಗೂ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗಿದೆ. ಮೊಬೈಲ್ ಮತ್ತು ಅಂತರ್ಜಾಲದ ಬಳಕೆ ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಯುವಜನತೆ ಪುಸ್ತಕ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಇಂತಹ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮಗಳು ಓದುಗರಲ್ಲಿ ಪುಸ್ತಕ ಪ್ರೀತಿ ಬೆಳೆಸಲು ಹಾಗೂ ಹೊಸ ಓದುಗರನ್ನು ಗ್ರಂಥಾಲಯದತ್ತ ಆಕರ್ಷಿಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗ್ರಂಥಾಲಯ ಸಿಬ್ಬಂದಿಗಳಾದ ಆಶಾ, ಸಾಧನಾ ಅಂಚನ್, ವಿದ್ಯಾ ವಾಣಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಓದುಗರು ಉಪಸ್ಥಿತರಿದ್ದರು. ಗ್ರಂಥಾಲಯ ಸಹಾಯಕಿ ಸುನೀತಾ ಬಿ. ಎಸ್. ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

