ಲಾವಣ್ಯ ಹತ್ಯೆ ಪ್ರಕರಣ: ಚಿಕಿತ್ಸೆ ಬಳಿಕ ಆರೋಪಿ ಚೇತನ್ ಪೊಲೀಸ್ ವಶಕ್ಕೆ

0
56

ಬಂಟ್ವಾಳ : ಜುಲೈ 16ರಂದು ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಪ್ರಕರಣದ ಆರೋಪಿ ಚೇತನ್ ಅವರನ್ನು ವೈದ್ಯರು ಆರೋಗ್ಯ ಸ್ಥಿರವಾಗಿದೆ ಎಂದು ದೃಢಪಡಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಏಕಮುಖ ಪ್ರೀತಿಯ ಹಿನ್ನೆಲೆಯಲ್ಲೇ ಮಾರಕಾಸ್ತ್ರದಿಂದ ಹತ್ಯೆಗೈದಿದ್ದಾನೆ ಎಂಬ ಆರೋಪವಿದೆ. ಘಟನೆ ನಡೆದ ಬಳಿಕ ಆರೋಪಿ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದು, ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದರು.

ಬಂಧನದ ಬಳಿಕ ಆರೋಪಿ ವಿಷಕಾರಿ ಪದಾರ್ಥ ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಮೊದಲು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ನಂತರ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ನಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಪೂರ್ಣಗೊಂಡು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ ಬಳಿಕ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಪ್ರಸ್ತುತ ಆರೋಪಿ ಪೊಲೀಸ್ ವಶದಲ್ಲಿದ್ದು, ಕಾನೂನು ಪ್ರಕ್ರಿಯೆಯಂತೆ ಬಂಧನಕ್ಕೆ ಸಂಬಂಧಿಸಿದ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ತನಿಖೆಯ ಅಗತ್ಯವನ್ನು ಆಧರಿಸಿ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸುವ ಸಾಧ್ಯತೆಯೂ ಇದೆ.

ಪೊಲೀಸ್ ಕಸ್ಟಡಿ ದೊರೆತಲ್ಲಿ ಪ್ರಕರಣದ ಪೂರ್ವಾಪರ, ಆರೋಪಿತ ಉದ್ದೇಶ, ಘಟನೆಯ ಹಿನ್ನೆಲೆ ಹಾಗೂ ಇತರ ಪ್ರಮುಖ ಅಂಶಗಳ ಕುರಿತು ಆರೋಪಿ ಚೇತನ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ಸಂಪೂರ್ಣ ತನಿಖೆ ಪೂರ್ಣಗೊಂಡ ಬಳಿಕವೇ ಘಟನೆಯ ಸಂಪೂರ್ಣ ಸತ್ಯಾಂಶ ಹಾಗೂ ಉದ್ದೇಶದ ಕುರಿತು ಅಧಿಕೃತ ಮಾಹಿತಿ ಹೊರಬೀಳಲಿದೆ.