ಸಿಐಡಿ ತನಿಖೆಯಿಂದ ಸತ್ಯ ಹೊರಬರಲಿ: ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಹೊಸ ಒತ್ತಾಯ

0
14

ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್‌ನ ನಿಕಟಪೂರ್ವ ಸದಸ್ಯ ನವೀನ್ ಸಾಲಿಯಾನ್ ಸ್ವಾಗತಿಸಿದ್ದಾರೆ.

ಪ್ರಕರಣ ದಿನದಿಂದ ದಿನಕ್ಕೆ ಹಲವು ಅನುಮಾನಗಳಿಗೆ ಕಾರಣವಾಗುತ್ತಿದ್ದು, ಇದರ ಹಿಂದಿರುವ ಸತ್ಯಾಸತ್ಯತೆಗಳು ಬಹಿರಂಗವಾಗಲು ಉನ್ನತ ಮಟ್ಟದ ಹಾಗೂ ನಿಷ್ಪಕ್ಷಪಾತ ತನಿಖೆ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿರುವುದು ಸ್ವಾಗತಾರ್ಹ ಕ್ರಮ ಎಂದು ಅವರು ತಿಳಿಸಿದ್ದಾರೆ.

ಪ್ರಕರಣ ರಾಜಕೀಯಗೊಳಿಸದಂತೆ ಮನವಿ

ಪ್ರಕರಣವನ್ನು ಯಾರೂ ರಾಜಕೀಯಗೊಳಿಸಬಾರದು. ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಪೊಲೀಸ್ ಇಲಾಖೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿಗಳನ್ನು ನವೀನ್ ಸಾಲಿಯಾನ್ ಒತ್ತಾಯಿಸಿದ್ದಾರೆ.

ಪೊಲೀಸ್ ಅಧಿಕಾರಿಯ ವಿರುದ್ಧದ ಲಂಚದ ಆರೋಪ ತನಿಖೆಯಾಗಲಿ

ಹಿರಿಯಡ್ಕ ಪೊಲೀಸ್ ಠಾಣೆಯ ಠಾಣಾಧಿಕಾರಿ ಪುನೀತ್ ಅವರ ವಿರುದ್ಧ ಮೃತ ಪ್ರದೀಪ್ ಪೂಜಾರಿ ಅವರ ಸಹೋದರ ಮಾಡಿರುವ ಲಂಚದ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಯಾವ ಕಾರಣಕ್ಕಾಗಿ ಹಾಗೂ ಯಾವ ಕಾರ್ಯನಿಮಿತ್ತ ಲಂಚ ಪಡೆಯಲಾಗಿದೆ ಎಂಬ ಆರೋಪದ ಕುರಿತು ಸಿಐಡಿ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಅಧಿಕಾರಿಯನ್ನು ಕರ್ತವ್ಯದಿಂದ ದೂರವಿರಿಸಿ ಅಮಾನತಿನಲ್ಲಿಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಕುಟುಂಬಕ್ಕೆ ನ್ಯಾಯ ಸಿಗಲಿ

ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಮೃತರ ಕುಟುಂಬಕ್ಕೆ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಲಭ್ಯವಿರುವ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ, ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸಿಐಡಿ ತಂಡಕ್ಕೆ ನವೀನ್ ಸಾಲಿಯಾನ್ ಮನವಿ ಮಾಡಿದ್ದಾರೆ.