ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ‘ಸಾಧನಾ ದರ್ಪಣಂ’
ನಿವೃತ್ತ ಪ್ರಾಂಶುಪಾಲ ಜೀವನ್ ದಾಸ್ ಎ. ಹಾಗೂ ಸಂಶೋಧನಾ ವಿಜ್ಞಾನಿ ಡಾ. ಸುಚೇತಾ ಅವರಿಗೆ ಸನ್ಮಾನ

ವಿವೇಕಾನಂದ ಪದವಿಪೂರ್ವ ಕಾಲೇಜಿನ 2026-27ನೇ ಸಾಲಿನ ವಾರ್ಷಿಕೋತ್ಸವದ ಅಂಗವಾಗಿ ಏಕತಾ ವೇದಿಕೆಯಲ್ಲಿ ಆಯೋಜಿಸಲಾದ ಮೊದಲ ದಿನದ ‘ಸಾಧನಾ ದರ್ಪಣಂ’ ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜೀವನ್ ದಾಸ್ ಎ. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
“ವಿದ್ಯಾರ್ಥಿಗಳ ಜೀವನದಲ್ಲಿ ನಿರ್ದಿಷ್ಟ ಗುರಿ ಇರಬೇಕು. ನಾವು ಏನಾಗಬೇಕು, ಜೀವನದಲ್ಲಿ ಏನನ್ನು ಸಾಧಿಸಬೇಕು ಎಂಬ ಸ್ಪಷ್ಟತೆ ಇರಬೇಕು. ಗುರಿಯಿಲ್ಲದ ಜೀವನ ದಿಕ್ಕಿಲ್ಲದ ಪ್ರಯಾಣದಂತೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ನಿರ್ಧರಿಸಿ, ಅದನ್ನು ಸಾಧಿಸಲು ನಿರಂತರ ಪ್ರಯತ್ನ ಮಾಡಬೇಕು. ತಾಯಿಯೇ ಮಗುವಿನ ಮೊದಲ ಗುರು. ಮಗುವಿಗೆ ಮೊದಲ ಮಾತು, ಮೊದಲ ನಡವಳಿಕೆ ಹಾಗೂ ಮೊದಲ ಸಂಸ್ಕಾರ ದೊರೆಯುವುದೇ ತಾಯಿಯಿಂದ. ತಂದೆ-ತಾಯಿ ನೀಡುವ ಪ್ರೀತಿ, ಮಾರ್ಗದರ್ಶನ ಮತ್ತು ಗುರುಗಳು ನೀಡುವ ಶಿಕ್ಷಣ ಜೀವನದುದ್ದಕ್ಕೂ ದಾರಿದೀಪವಾಗಿರುತ್ತವೆ” ಎಂದು ಅವರು ಹೇಳಿದರು.
ಕಾರ್ಯಕ್ರಮದ ಮತ್ತೊಬ್ಬ ಮುಖ್ಯ ಅತಿಥಿಯಾದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಸಂಶೋಧನಾ ವಿಜ್ಞಾನಿ ಡಾ. ಸುಚೇತಾ ಅವರನ್ನು ಸನ್ಮಾನಿಸಲಾಯಿತು. ಅವರು ಯೆನೆಪೋಯ (ಪರಿಗಣಿಸಲ್ಪಟ್ಟ) ವಿಶ್ವವಿದ್ಯಾನಿಲಯದಲ್ಲಿ ಅಜೀಂ ಪ್ರೇಮ್ಜಿ ಫೌಂಡೇಶನ್ನ ಅನುದಾನಿತ ಕ್ಯಾನ್ಸರ್ ತಪಾಸಣಾ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಡಾ. ಸುಚೇತಾ, “ವಿದ್ಯಾರ್ಥಿ ಜೀವನವು ಭವಿಷ್ಯದ ಬದುಕಿಗೆ ಬುನಾದಿಯಿದ್ದಂತೆ. ಈ ಹಂತದಲ್ಲಿ ಗೊಂದಲಗಳಿಗೆ ಒಳಗಾಗದೆ ಭವಿಷ್ಯದ ಬಗ್ಗೆ ನಿರ್ದಿಷ್ಟ ಉದ್ದೇಶ ಹೊಂದಿರಬೇಕು. ದೊರೆಯುವ ಸೂಕ್ತ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಕೇವಲ ಅಂಕಗಳನ್ನು ಗಳಿಸುವುದಷ್ಟೇ ಶಿಕ್ಷಣದ ಉದ್ದೇಶವಲ್ಲ. ಹೊಸ ವಿಚಾರಗಳನ್ನು ಅನ್ವೇಷಿಸುತ್ತಾ, ಸ್ವಾವಲಂಬಿಗಳಾಗಿ ಬೆಳೆಯಲು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಸುಧಾರಿಸಿಕೊಳ್ಳಬೇಕು. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಅದೃಷ್ಟಕ್ಕಿಂತ ನಿರಂತರ ಕಠಿಣ ಪರಿಶ್ರಮ ಮುಖ್ಯ” ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಕೋಶಾಧಿಕಾರಿ ಸಚಿನ್ ಶೆಣೈ ಕೆ. ಮಾತನಾಡಿ, “ಸಂಸ್ಥೆಯ ಪ್ರಗತಿಯಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಅದರಲ್ಲೂ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖ. ವಿದ್ಯಾರ್ಥಿಗಳ ಸಾಧನೆಯೇ ಸಂಸ್ಥೆಯ ಕೀರ್ತಿ ಮತ್ತು ಗೌರವವನ್ನು ಹೆಚ್ಚಿಸುತ್ತದೆ. ತಮ್ಮ ಸಾಧನೆಗಳ ಮೂಲಕ ಪೋಷಕರಿಗೆ, ಶಿಕ್ಷಕರಿಗೆ ಹಾಗೂ ತಾವು ಕಲಿತ ಸಂಸ್ಥೆಗೆ ಹೆಮ್ಮೆ ತರುವ ವ್ಯಕ್ತಿಗಳಾಗಿ ವಿದ್ಯಾರ್ಥಿಗಳು ರೂಪುಗೊಳ್ಳಬೇಕು” ಎಂದರು.
ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ವಿವಿಧ ಸಂಘಗಳ ವತಿಯಿಂದ ಆಯೋಜಿಸಲಾಗಿದ್ದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ವಿವಿಧ ಪಂದ್ಯಾಟಗಳಲ್ಲಿ ವಿಜೇತರಾದವರಿಗೂ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಎನ್. ಸತ್ಯನಾರಾಯಣ ಹಾಗೂ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ ಎಂ. ಉಪಸ್ಥಿತರಿದ್ದರು. ಉಪನ್ಯಾಸಕಿ ದಯಾಮಣಿ ಟಿ.ಕೆ. ಸ್ವಾಗತಿಸಿದರು. ದಿವ್ಯಾ ಕೆ. ವಂದಿಸಿದರು. ಪುಷ್ಪಲತಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

