ಹರ್ ಘರ್ ತಿರಂಗಾ’ ಅಭಿಯಾನದೊಂದಿಗೆ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸೋಣ : ಕುತ್ಯಾರು ನವೀನ್ ಶೆಟ್ಟಿ

0
13

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.13ರಿಂದ ಆ.15ರ ವರೆಗೆ ದೇಶದಾದ್ಯoತ ಚಾಲ್ತಿಯಲ್ಲಿರುವ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಪ್ರತಿಯೊಬ್ಬರೂ ತಮ್ಮ ಮನೆಯ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಜಿಲ್ಲೆಯಾದ್ಯoತ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳು ಮತ್ತು ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಕ್ಷದ ಸೂಚನೆಯಂತೆ ಜಿಲ್ಲೆಯಾದ್ಯoತ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ‘ತಿರಂಗಾ ಯಾತ್ರೆ’ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಆ.15ರಂದು ಜಿಲ್ಲೆ ಹಾಗೂ ಮಂಡಲ ಕಛೇರಿಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನೆರವೇರಲಿದೆ. ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟ ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ರಾಜ್ಯಾದ್ಯಂತ ನಡೆಯಲಿರುವ ಸರಣಿ ಪ್ರತಿಭಟನೆಯು ಉಡುಪಿ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದೆ ಎಂದು ಕುತ್ಯಾರು ತಿಳಿಸಿದರು.

ತಿಂಗಳ ಪ್ರತೀ ವಾರದಲ್ಲಿ ಕ್ರಮವಾಗಿ ಮಂಡಲ, ಜಿಲ್ಲೆ, ಶಕ್ತಿ ಕೇಂದ್ರ ಹಾಗೂ ಬೂತ್ ಸಮಿತಿಗಳ ಸಂಘಟನಾತ್ಮಕ ಸಭೆಗಳು ನಡೆಯಲಿವೆ. ವಿವಿಧ ಸ್ತರದ ಪದಾಧಿಕಾರಿಗಳು ಸಮಿತಿ ಹಾಗೂ ಕಾರ್ಯಕಾರಿಣಿ ಸದಸ್ಯರು ಪಕ್ಷದ ಎಲ್ಲಾ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜೊತೆಗೆ ಸದೃಢ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ನೂತನ ಜಿಲ್ಲಾ ಕಾರ್ಯಕಾರಿಣಿ ಸದಸ್ಯರ ಪರಿಚಯ ವರ್ಗ ನಡೆಯಿತು. ಮಂಡಲವಾರು ಚಟುವಟಿಕೆಗಳ ವರದಿ ಮಂಡಿಸಲಾಯಿತು.

ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ, ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯದರ್ಶಿ ಉಮೇಶ್ ನಾಯ್ಕ್ ಚೇರ್ಕಾಡಿ ವಂದಿಸಿದರು.