ಉಡುಪಿ: ರಾಷ್ಟ್ರೀಯ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರವು ಸಾಸ್ತಾನ ಹಾಗೂ – ಶಿರೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ನೀಡಿರುವ ರಿಯಾಯಿತಿ ಹೆಜಮಾಡಿ ಭಾಗದ ಟೋಲ್ ವ್ಯಾಪ್ತಿಯ ಸ್ಥಳೀಯರಿಗೆ ನೀಡುವಂತೆ ಕೋರಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ಶಿಫಾರಸ್ಸು ಪತ್ರ ಬರೆಯಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ ಟೋಲ್ ಸುಂಕ ವಸೂಲಾತಿಗೆ ಸಂಬಂಧಿಸಿದಂತೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಸಾಸ್ತಾನ ಹಾಗೂ ಶಿರೂರು ಸುಂಕ ವಸೂಲಾತಿ ಕೇಂದ್ರವು ಸ್ಥಳೀಯ ವಾಹನಗಳಿಗೆ ಈ ಹಿಂದೆ ನೀಡುತ್ತಿರುವ ರಿಯಾಯಿತಿಯನ್ನು ಮುಂದುವರೆಸುತ್ತಿದ್ದು, ಹೆಜಮಾಡಿ ವ್ಯಾಪ್ತಿಯಲ್ಲಿ ಈ ನಿಯಮ ಪಾಲನೆಯಾಗುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಸಾಸ್ತಾನದಲ್ಲಿ 10 ಕಿ.ಮೀ ವ್ಯಾಪ್ತಿಯಲ್ಲಿ ಸ್ಥಳೀಯರಿಗೆ ವಿನಾಯಿತಿ ನೀಡಲಾಗಿದೆ. ಈ ಮಾದರಿಯನ್ನೇ ಹೆಜಮಾಡಿಯಲ್ಲಿ ಅನುಸರಿಸಿದ್ದಲ್ಲಿ ಸ್ಥಳೀಯರಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆಯನ್ನು ಸ್ಥಳೀಯರು ಸಲ್ಲಿಸುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತದ ವತಿಯಿಂದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಗೆ ವಿನಾಯಿತಿ ನೀಡುವಂತೆ ಮನವಿ ಪತ್ರ ಸಲ್ಲಿಸಲಾಗುವುದು ಎಂದರು.
ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ ಟೋಲ್‌ನ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಹಲವು ಬಾರಿ ಟೋಲ್‌ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು ಅನಾನುಕೂಲತೆ ಉಂಟಾಗುತ್ತದೆ. ಟೋಲ್ ಪ್ಲಾಜಾ ಸುತ್ತಮುತ್ತಲಿನ ಸ್ಥಳೀಯ ವಾಹನಗಳಿಗೆ ಹಾಗೂ ನಿಗದಿತ ವ್ಯಾಪ್ತಿಯಲ್ಲಿ ಬರುವ ನೋಂದಾಯಿತ ವಾಹನಗಳಿಗೆ ಸುಂಕ ವಿನಾಯಿತಿ ಅಥವಾ ಮಾಸಿಕ ಪಾಸ್ ಸೌಲಭ್ಯ ಕಲ್ಪಿಸಿದಲ್ಲಿ ಅವರುಗಳಿಗೆ ಅನುಕೂಲವಾಗಲಿದೆ ಎಂಬ ಬೇಡಿಕೆ ಇದೆ.
ಈಗಾಗಲೇ ರಾಷ್ಟ್ರೀಯ ಹೆದ್ದಾರಿ 66 ರ ಕೆಲವು ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲು ಅನುಮತಿ ದೊರಕಿದ್ದು, ಇವುಗಳ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪ್ರಾರಂಬಿಸಿ, ಪೂರ್ಣಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸರ್ವೀಸ್ ರಸ್ತೆ, ರಸ್ತೆ ರಿಪ್ಲೆಕ್ಟರ್‌ಗಳ ಅಳವಡಿಕೆ, ದಾರಿದೀಪ ಅಳವಡಿಕೆ, ರಸ್ತೆಯಲ್ಲಿ ಹೊಂಡ-ಗುಂಡಿ ದುರಸ್ಥಿ, ಒಳಚರಂಡಿ ಕಾಮಗಾರಿ, ಜಂಕ್ಷನ್‌ಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಮತ್ತಿತರ ಸುರಕ್ಷತಾ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತಗಳಿಗೆ ಕಡಿವಾಣ ಹಾಕಬಹುದಾಗಿದ್ದು, ಇದಕ್ಕೆ ಒತ್ತು ನೀಡಬೇಕು ಎಂದು ಎಂದು ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿ ಹೆಜಮಾಡಿ ಟೋಲ್ ಸಮೀಪದ ಸಾರ್ವಜನಿಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಾಜಿ ‘ಜನಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಮೀಪದ ಸ್ಥಳೀಯವಾಗಿ ವಾಸವಿರುವ ನಾವುಗಳು ನಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ದಿನದಲ್ಲಿ ಹಲವಾರು ಬಾರಿ ಟೋಲ್ ಅನ್ನು ಪ್ರವೇಶಿಸಿ ಹೋಗುವುದು ಅನಿವಾರ್ಯವಾಗಿದ್ದು, ಪ್ರತೀ ಬಾರಿಯೂ ಶುಲ್ಕ ಪಾವತಿ ಮಾಡುವುದು ಕಷ್ಟಸಾಧ್ಯ. ಸಾಸ್ತಾನಕ್ಕೆ ನೀಡುವ ವಿನಾಯಿತಿಯನ್ನು ನಮಗೂ ನೀಡಬೇಕು ಎಂದು ಒತ್ತಾಯಿಸಿದರು. ರಾ. ಹೆದ್ದಾರಿಯ ಕೆಲವೊಂದು ವ್ಯಾಪ್ತಿಯಲ್ಲಿ ಸರ್ವಿಸ್ ರೋಡ್ ನಿರ್ಮಾಣ ಮಾಡಬೇಕು. ರಸ್ತೆ ದೀಪ ಅಳವಡಿಕೆ, ಟೋಲ್‌ನ ಸಿಬ್ಬಂದಿಗಳು ಸಾರ್ವಜನಿಕರೊಂದಿಗೆ ಸಹನೆ ವರ್ತಿಸುವ ಬಗ್ಗೆ, ಸೇರಿದಂತೆ ಮತ್ತಿತರ ಅಹವಾಲುಗಳನ್ನು ಸಲ್ಲಿಸಿದರು. ಸಂಯಮದಿಂದ
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಯ್ಕೆ, ಅಭಿಯಂತರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

