ಉಡುಪಿ: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಸಮಾಜಸೇವಕ, ಸಂಘಟಕ ಲಯನ್ಸ್ ನಾಯಕ ಲಯನ್ ಉದಯಕುಮಾರ್ ಹೆಗ್ಡೆ, ಯರ್ಲಪಾಡಿ ಅವರನ್ನು ನೇಮಕ ಮಾಡಲಾಗಿದೆ.
ಉದಯಕುಮಾರ್ ಹೆಗ್ಡೆ ಅವರು ಹಲವು ದಶಕಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸಹಕಾರ ಹಾಗೂ ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಯರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕಾರ್ಕಳ ಭೂನ್ಯಾಯ ಮಂಡಳಿ ಸದಸ್ಯರಾಗಿ, ನೀರೆ ಬೈಲೂರು ವ್ಯವಸಾಯ ಸೇವಾ ಸಂಘದ ನಿರ್ದೇಶಕರಾಗಿ ಮೂರು ಅವಧಿಗಳಲ್ಲಿ, ಸ್ವರ್ಣ ಸೌಹಾರ್ದ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಕಾರ್ಕಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಅಲ್ಲದೆ ಬೈಲೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ನೀರೆಬೈಲೂರಿನ ಅಧ್ಯಕ್ಷರಾಗಿ, ಲಯನ್ಸ್ ಜಿಲ್ಲೆ 317Cಯ ವಲಯಾಧ್ಯಕ್ಷರಾಗಿ, ಪ್ರಾಂತೀಯ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಸಂಪುಟ ಸದಸ್ಯರಾಗಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ.
ಧಾರ್ಮಿಕ ಕ್ಷೇತ್ರದಲ್ಲಿಯೂ ಅವರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ, ಕರ್ವಾಲು ಹಾಗೂ ಶ್ರೀ ವೀರಮಾರುತಿ ದೇವಸ್ಥಾನ, ಕೋಟೆಬಾಗಿಲು, ಮೂಡಬಿದ್ರೆ ಬ್ರಹ್ಮಕಲಶೋತ್ಸವ ಸಮಿತಿಗಳ ಅಧ್ಯಕ್ಷರಾಗಿ, ಆಡಳಿತ ಮೊಕ್ತೇಸರರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷರಾಗಿ, ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಯರ್ಲಪಾಡಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ, ಬೈಲೂರು ಶ್ರೀ ರಾಮ ಮಂದಿರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮೈತ್ರಿ ಸೇವಾ ಸಂಘ, ಪೃಥ್ವಿ ಯುವಕ ಮಂಡಲ, ಪಂಚಾಯತ್ ರಾಜ್ ಒಕ್ಕೂಟ ಕಾರ್ಕಳ ತಾಲೂಕು, ಕಾರ್ಕಳ ತಾಲೂಕು ಲಾರಿ ಚಾಲಕರು ಮತ್ತು ಮಾಲಕರ ಸಂಘ ಸೇರಿದಂತೆ ಹತ್ತು ಹಲವು ಸಂಘ-ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಜನಮನ್ನಣೆ ಗಳಿಸಿದ್ದಾರೆ.
ಅವರ ಸುದೀರ್ಘ ಸಂಘಟನಾ ಅನುಭವ, ಸಮಾಜಸೇವೆ ಹಾಗೂ ತುಳು ಭಾಷೆ, ಸಂಸ್ಕೃತಿ ಮತ್ತು ಸಮುದಾಯದ ಅಭಿವೃದ್ಧಿಯ ಮೇಲಿನ ಬದ್ಧತೆಯನ್ನು ಪರಿಗಣಿಸಿ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಅಂತರರಾಷ್ಟ್ರೀಯ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕರ್ನಾಟಕ ರಾಜ್ಯಾಧ್ಯಕ್ಷ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ಹಾಗೂ ಕೇಂದ್ರೀಯ ಅಧ್ಯಕ್ಷ ಡಾ. ಅವಿನ್ ಬಿ. ಆರ್. ಆಳ್ವ, ಪ್ರಧಾನ ಕಾರ್ಯದರ್ಶಿ ಅರವಿಂದ ಬೆಳ್ಚಾಡ ಅವರು ಲಯನ್ ಉದಯಕುಮಾರ್ ಹೆಗ್ಡೆ, ಯರ್ಲಪಾಡಿ ಅವರನ್ನು ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಳಿಸಿದ್ದಾರೆ.
ಈ ನೇಮಕವನ್ನು ತುಳುವರ್ಲ್ಡ್ ಫೌಂಡೇಶನ್ನ ಗೌರವಾಧ್ಯಕ್ಷ ಶ್ರೀ ಶ್ರೀ ಹರಿನಾರಾಯಣ ದಾಸ ಅಸ್ರಣ್ಣ, ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ಕಾರ್ಯದರ್ಶಿ ವಸಂತ ರೈ ಕುತ್ತೇತ್ತೂರು ಹಾಗೂ ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಅವರು ಹರ್ಷದಿಂದ ಸ್ವಾಗತಿಸಿ, ಲಯನ್ ಉದಯಕುಮಾರ್ ಹೆಗ್ಡೆ ಅವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

