ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿದ ಲಾರಿ : ಬೈಕ್ ಸವಾರ ಬಲಿ

0
41

ಉಡುಪಿ: ಅಪಘಾತಕ್ಕೀಡಾದ ಸರಕು ಸಾಗಣೆ ಲಾರಿಯನ್ನು ಹೆದ್ದಾರಿಯಲ್ಲಿ ಮೇಲೆತ್ತುವ ಕಾರ್ಯ ನಡೆಯುತ್ತಿದ್ದ ವೇಳೆ ಮತ್ತೊಂದು ಲಾರಿ ನಿಯಂತ್ರಣ ತಪ್ಪಿ ಹೈವೆ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬೈಂದೂರು ಸಮೀಪ ನಡೆದಿದೆ.

ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ಕು ಬೈಕ್‌ಗಳು ಜಖಂಗೊಂಡಿವೆ.

ಹೆದ್ದಾರಿಯಲ್ಲಿ ಸರಕು ತುಂಬಿದ ಲಾರಿಯೊಂದು ಅಪಘಾತಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಅದನ್ನು ಮೇಲೆತ್ತುವ ಕಾರ್ಯ ನಡೆಯುತ್ತಿತ್ತು. ಈ ಕಾರಣದಿಂದ ರಸ್ತೆ ಸಂಚಾರಕ್ಕೆ ತಾತ್ಕಾಲಿಕವಾಗಿ ತಡೆ ಉಂಟಾಗಿದ್ದು, ವಾಹನಗಳ ಸಂಚಾರ ನಿಯಂತ್ರಣಕ್ಕಾಗಿ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು.

ಈ ವೇಳೆ ಇಳಿಜಾರು ರಸ್ತೆಯಲ್ಲಿ ಅತಿವೇಗವಾಗಿ ಬಂದ ರಬ್ಬರ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೈವೆ ಗಸ್ತು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಮೀಪದಲ್ಲಿದ್ದ ನಾಲ್ಕು ಬೈಕ್‌ಗಳು ಜಖಂಗೊಂಡಿದ್ದು, ಬೈಕ್‌ನಲ್ಲಿದ್ದ ನಾಗೇಂದ್ರ ಮಹಾಲೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿಯಂತ್ರಣ ತಪ್ಪಿದ ಲಾರಿ ಹೈವೆ ಗಸ್ತು ವಾಹನಕ್ಕೆ ಡಿಕ್ಕಿಯಾಗದೆ ಮುಂದಕ್ಕೆ ನುಗ್ಗಿದ್ದರೆ, ಹೆದ್ದಾರಿ ಮುಂಭಾಗದಲ್ಲಿದ್ದ ಸಾರ್ವಜನಿಕರು ಹಾಗೂ ಹೊಟೇಲ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿಯಾಗಿ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ರಬ್ಬರ್ ತುಂಬಿದ್ದ ಲಾರಿ ಕೇರಳದಿಂದ ಮಹಾರಾಷ್ಟ್ರದ ಕಡೆಗೆ ತೆರಳುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.