ಮಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ : ಮೂವರ ಬಂಧನ

0
119

ಮಂಗಳೂರು : ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಉಳ್ಳಾಲ ತಾಲೂಕಿನ ಮುಡಿಪು ನಿವಾಸಿಗಳಾದ ನವಾಜ್ ಅಲಿಯಾಸ್ ನವ್ವಾ ಅಲಿಯಾಸ್ ಮುಡಿಪು ನವಾಜ್ (35), ಮೊಹಮ್ಮದ್ ಆರೀಫ್ ಎನ್. (36) ಹಾಗೂ ಲಾಯ್ಡ್ ಡಿಸೊಜಾ (35) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಆಧರಿಸಿ ದಾಳಿ

ಬೆಂಗಳೂರು ನಗರದಿಂದ ಭಾರಿ ಪ್ರಮಾಣದಲ್ಲಿ ಎಂಡಿಎಂಎ ಖರೀದಿಸಿಕೊಂಡು ಬಂದು ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿತ್ತು.

ಈ ಮಾಹಿತಿಯ ಆಧಾರದ ಮೇಲೆ ಸೆಪ್ಟೆಂಬರ್ 26ರಂದು ಸಂಜೆ ಉಳ್ಳಾಲ ತಾಲೂಕಿನ ಮುಡಿಪು ಕಾಯರ್ ಗೋಳಿ ಕ್ರಾಸ್ ಬಳಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ 240 ಗ್ರಾಂ ಎಂಡಿಎಂಎ, ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ ಮಾದಕವಸ್ತು ಸಾಗಾಟಕ್ಕೆ ಬಳಸಲಾಗುತ್ತಿದ್ದ ಟೆಂಪೋ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ₹29.80 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಮುಖ ಆರೋಪಿಗೆ 16 ಪ್ರಕರಣಗಳ ಹಿನ್ನೆಲೆ

ಬಂಧಿತ ಪ್ರಮುಖ ಆರೋಪಿ ನವಾಜ್ ಅಲಿಯಾಸ್ ಮುಡಿಪು ನವಾಜ್ ವಿರುದ್ಧ ಈ ಹಿಂದೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ 16 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವುಗಳಲ್ಲಿ ಕೊಣಾಜೆ ಠಾಣೆಯಲ್ಲಿ 12, ಉಳ್ಳಾಲ ಠಾಣೆಯಲ್ಲಿ 2 ಹಾಗೂ ಮುಲ್ಕಿ ಮತ್ತು ಸುರತ್ಕಲ್ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿವೆ. ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕೊಣಾಜೆ ಹಾಗೂ ಉಳ್ಳಾಲ ಠಾಣೆಗಳಲ್ಲಿ ಈತನ ವಿರುದ್ಧ ತಲಾ ಎರಡು ಪ್ರಕರಣಗಳು ಈ ಹಿಂದೆಯೇ ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಜಾಲದ ಇತರರಿಗಾಗಿ ಶೋಧ

ಮಾದಕವಸ್ತು ಸಾಗಾಟ ಮತ್ತು ಮಾರಾಟದ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಬಂಧಿತರಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಜಾಲದ ಇತರ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.