ಡೇವಿಡ್ ಡಿಸೋಜಾ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮತ್ತೋರ್ವ ಆರೋಪಿ ಅರೆಸ್ಟ್

0
37

ಉಡುಪಿ : ಕಾಪು ತಾಲೂಕಿನ ಮುದರಂಗಡಿ ಜಂಕ್ಷನ್‌ನಲ್ಲಿ ಆ.7ರ ಸಂಜೆ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ, ಕೊಲೆ ಕೃತ್ಯಕ್ಕೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಬಿಹಾರ ಮೂಲದ ಸೂರಜ್ ಕುಮಾರ್ (31) ಎಂಬಾತನನ್ನು ಉತ್ತರಾಖಂಡದ ನೈನಿತಾಲ್‌ನಲ್ಲಿ ಬಂಧಿಸಲಾಗಿದೆ.

ಬಂಧಿತ ಸೂರಜ್ ಕುಮಾರ್ ಬಿಹಾರದ ಶೇಖ್‌ಪುರ ನಿವಾಸಿಯಾಗಿದ್ದು, ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆತನನ್ನು ಪತ್ತೆಹಚ್ಚಿದ ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸೂರಜ್ ಕುಮಾರ್ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಘಟನೆ ವಿವರ

ಆ.7ರಂದು ಸಂಜೆ ಸುಮಾರು 3.45ರ ವೇಳೆಗೆ ಮುದರಂಗಡಿಯ ಸ್ಟೆಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್‌ನ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕೆಲವೇ ಗಂಟೆಗಳಲ್ಲಿ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ರಾಜು, ಅನ್ನೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅವರನ್ನು ಬಂಧಿಸಿದ್ದರು.

ಪ್ರಮುಖ ಆರೋಪಿ ರಾಜು ಬಂಧನದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದರು. ಗಾಯಗೊಂಡಿರುವ ರಾಜುವಿಗೆ ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಇದೇ ಪ್ರಕರಣದಲ್ಲಿ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ, ಕೃತ್ಯಕ್ಕೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಹಾಗೂ ಕಿಶೋರ್ ರಾಮ ಪೂಜಾರಿ ಎಂಬವರನ್ನೂ ಪೊಲೀಸರು ಬಂಧಿಸಿದ್ದರು.

ಇದೀಗ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಮತ್ತೋರ್ವ ಆರೋಪಿ ಸೂರಜ್ ಕುಮಾರ್‌ನನ್ನು ಉತ್ತರಾಖಂಡದ ನೈನಿತಾಲ್‌ನಲ್ಲಿ ಬಂಧಿಸಿದ್ದು, ಆತನಿಂದ ಕೃತ್ಯಕ್ಕೆ ಸಂಬಂಧಿಸಿದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.