ಉಡುಪಿ ಜಿಲ್ಲಾ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಿ : ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಗೆ ತುಳುನಾಡು ರಕ್ಷಣಾ ವೇದಿಕೆ ಮನವಿ

0
47

ಉಡುಪಿ : ಅಜ್ಜರಕಾಡಿನ ನೂತನ ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನು ತಕ್ಷಣವೇ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳಿಸಿ ಸಾರ್ವಜನಿಕರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ತುಳುನಾಡು ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆರೋಗ್ಯ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರಿಗೆ ತುಳು ಸಾಲು ಹಾಕಿ ಗೌರವದಿಂದ ಸ್ವಾಗತಿಸಿ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ (UDA) ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಶೀಘ್ರ ನಿವಾರಣೆ ಮಾಡುವುದು, ಉಡುಪಿ ಜಿಲ್ಲಾ ಆಸ್ಪತ್ರೆಯು ಪೂರ್ಣ ಪ್ರಮಾಣದಲ್ಲಿ ಎಲ್ಲಾ ಸೇವೆಗಳೊಂದಿಗೆ ಕಾರ್ಯನಿರ್ವಹಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವುದು, ಹಾಗೂ 94C ಮತ್ತು 94CC ಅಡಿಯಲ್ಲಿ ಅರ್ಜಿ ಸಲ್ಲಿಸಲು ಮರು ಅವಕಾಶ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಡಲಾಗಿದೆ.

ಇದೇ ವೇಳೆ, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೋಟೇಶ್ವರದಿಂದ ಕೋಟೆಕಾರ್‌ವರೆಗೆ ಹೆದ್ದಾರಿಯ ಎರಡೂ ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಮಾಡುವಂತೆ ಮನವಿ ಮಾಡಲಾಗಿದೆ. ಇದರಿಂದ ವಾಹನ ಸಂಚಾರ ಸುಗಮವಾಗುವುದರ ಜೊತೆಗೆ ಅಪಘಾತಗಳ ಪ್ರಮಾಣ ಕಡಿಮೆಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.

ಅಲ್ಲದೆ, ಹೊಸದಾಗಿ ರಚನೆಯಾಗಿರುವ ಹೆಬ್ರಿ ಹಾಗೂ ಕಾಪು ತಾಲೂಕುಗಳಿಗೆ ಅಗತ್ಯ ಸರ್ಕಾರಿ ಕಚೇರಿಗಳು, ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವೆಗಳನ್ನು ಶೀಘ್ರವಾಗಿ ಒದಗಿಸಿ ಸಂಪೂರ್ಣ ಆಡಳಿತಾತ್ಮಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗಿದೆ.

ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಎಲ್ಲ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಚಿವರನ್ನು ಭೇಟಿ ಮಾಡಿದ ವೇದಿಕೆಯ ಪದಾಧಿಕಾರಿಗಳು, ಅಜ್ಜರಕಾಡಿನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಕಟ್ಟಡವು ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಸುಸಜ್ಜಿತವಾಗಿ ನಿರ್ಮಾಣಗೊಂಡಿದ್ದರೂ, ಆಸ್ಪತ್ರೆಯ ಎಲ್ಲಾ ವಿಭಾಗಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸದಿರುವುದರಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಿದರು.

ಸರ್ಕಾರಿ ಆಸ್ಪತ್ರೆಯ ಮೇಲೆಯೇ ಸಂಪೂರ್ಣ ಅವಲಂಬಿತರಾಗಿರುವ ಬಡವರು, ಕಾರ್ಮಿಕರು, ರೈತರು, ಹಿರಿಯ ನಾಗರಿಕರು ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ಜನರು ಸಮರ್ಪಕ ವೈದ್ಯಕೀಯ ಸೇವೆ ದೊರೆಯದ ಕಾರಣ ಅನಿವಾರ್ಯವಾಗಿ ದುಬಾರಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಾವಿರಾರು ಕುಟುಂಬಗಳು ಹೆಚ್ಚುವರಿ ವೈದ್ಯಕೀಯ ವೆಚ್ಚವನ್ನು ಭರಿಸಲು ಸಾಲದ ಮೊರೆ ಹೋಗುವಂತಾಗಿದ್ದು, ಆರ್ಥಿಕ ಸಂಕಷ್ಟ ಮತ್ತಷ್ಟು ಹೆಚ್ಚುತ್ತಿದೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ.

ನೂತನ ಆಸ್ಪತ್ರೆಯಲ್ಲಿ ಅಗತ್ಯ ವೈದ್ಯರು, ತಜ್ಞ ವೈದ್ಯರು, ಶುಶ್ರೂಷಕರು, ತಾಂತ್ರಿಕ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಯನ್ನು ಶೀಘ್ರ ನೇಮಕ ಮಾಡಿ, ಎಲ್ಲಾ ಚಿಕಿತ್ಸಾ ವಿಭಾಗಗಳು, ಪರೀಕ್ಷಾ ಘಟಕಗಳು ಮತ್ತು ತುರ್ತು ಚಿಕಿತ್ಸಾ ಸೇವೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಲ್ಲದೆ, ಉಡುಪಿ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯವನ್ನು ಬಲಪಡಿಸಿ, ವೈದ್ಯರ ಕೊರತೆ, ಔಷಧಗಳ ಲಭ್ಯತೆ, ವೈದ್ಯಕೀಯ ಉಪಕರಣಗಳು ಮತ್ತು ಸಿಬ್ಬಂದಿ ಸಮಸ್ಯೆಗಳನ್ನು ನಿವಾರಿಸುವ ಮೂಲಕ ಸರ್ಕಾರಿ ಆರೋಗ್ಯ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ರೂಪಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಆರೋಗ್ಯ ಸಚಿವರಾಗಿರುವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ. ಖಾದರ್ ಅವರು ಈ ವಿಷಯಕ್ಕೆ ವಿಶೇಷ ಆದ್ಯತೆ ನೀಡಿ, ನೂತನ ಜಿಲ್ಲಾ ಆಸ್ಪತ್ರೆಯನ್ನು ಶೀಘ್ರವೇ ಸಂಪೂರ್ಣ ಸಾಮರ್ಥ್ಯದೊಂದಿಗೆ ಕಾರ್ಯಾರಂಭಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಇದರೊಂದಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿ, ಸಾರ್ವಜನಿಕರಿಗೆ ಗುಣಮಟ್ಟದ ಮತ್ತು ಸುಲಭವಾಗಿ ಲಭ್ಯವಾಗುವ ಆರೋಗ್ಯ ಸೇವೆ ಒದಗಿಸಬೇಕೆಂದು ತುಳುನಾಡು ರಕ್ಷಣಾ ವೇದಿಕೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಫ್ರ್ಯಾಂಕಿ ಡಿಸೋಜ ರವರು ಮಣಿಪಾಲ ರಾಜ್ಯತಾದ್ರಿ ಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ರವರಿಗೆ ತುಳುನಾಡ ಹೆಮ್ಮೆಯ ಸೂರ್ಯ ಚಂದ್ರ ಚಿಹ್ನೆ ಇರುವ ಶಾಲನ್ನು ಹಾಕಿ ದಿನಾಂಕ 4 – 7- 2026 ರಂದು ಮನವಿಯನ್ನು ನೀಡಿದರು ಹಾಗೂ ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಜಯ ಪೂಜಾರಿ ಲಕ್ಷ್ಮಿ ನಗರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ನಾಗಲಕ್ಷ್ಮಿ ಸುಬ್ರಮಣ್ಯ ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ , ಸುರೇಂದ್ರ ಪೂಜಾರಿ ಹಾವಂಜೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಶಂಕರ್ ಉಡುಪಿ ಕಾಪು ತಾಲೂಕ ಘಟಕದ ಅಧ್ಯಕ್ಷರಾದ ನಿತಿನ್ ಕುಮಾರ್ ಶೆಟ್ಟಿ . ಬೈರಂಪಲ್ಲಿ ಘಟಕದ ಅಧ್ಯಕ್ಷರಾದ ಕೃಷ್ಣಾನಂದ ನಾಯಕ್ ಬೈರಂಪರಿ ಘಟಕದ ಉಪಾಧ್ಯಕ್ಷರಾದ ಗುಣಾಕಾರ ಹಾಗೂ ಜಿಲ್ಲಾ ಜೊತೆ ಕಾರ್ಯದರ್ಶಿಯಾದ ಪ್ರೀತಮ್, ಸಂಘಟನಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಸುಬ್ರಹ್ಮಣ್ಯ ಭಟ್, ಕಾಪು ಮಹಿಳಾ ಘಟಕದ ಅಧ್ಯಕ್ಷರಾದ ಅನುಸೂಯ ಶೆಟ್ಟಿ ಹಾಗೂ ಮನೋಜ್ ಗಣೇಶ್ ಕುಲಾಲ್ ಬೈರಂಪಳ್ಳಿ, ಶಿವಕುಮಾರ್ ಪೂಜಾರಿ ಬೈರಂಪಳ್ಳಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಎಲ್ಲಾ ತಾಲೂಕುಗಳಿಂದ ಪದಾಧಿಕಾರಿಗಳು ಅಧ್ಯಕ್ಷರು ಸದಸ್ಯರು ಉಪಸ್ಥಿತಿ ಇದ್ದರು.

LEAVE A REPLY

Please enter your comment!
Please enter your name here