ಮಂಗಳೂರು : ನಗರದ ಬರ್ಕೆ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಸೊತ್ತುಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಾಗಿದೆ.
ಸೆ.28ರಂದು ಮಧ್ಯಾಹ್ನ ಅಳಕೆ ಕಂಬ್ರ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದಕ್ಕೆ ಬೀಗ ಹಾಕಿ ಮನೆಯವರು ಹೊರಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಮುಂಭಾಗದ ಬಾಗಿಲಿನ ಕೊಂಡಿ ಮುರಿದು ಕಳ್ಳರು ಮನೆಯೊಳಗೆ ಪ್ರವೇಶಿಸಿರುವುದು ಪತ್ತೆಯಾಗಿತ್ತು. ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ವಸ್ತುಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಟ ರಸ್ತೆಯ ಮನೆಯೊಂದಕ್ಕೂ ಕಳ್ಳರು ನುಗ್ಗಿದ್ದರು. ಮನೆಯ ಲಾಕರ್ ಒಡೆದು ಪರಿಶೀಲಿಸಿದರೂ ಯಾವುದೇ ಬೆಲೆಬಾಳುವ ವಸ್ತುಗಳು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಕಳವು ನಡೆಸಿದ ಬಳಿಕ ಆರೋಪಿಗಳು ರೈಲಿನಲ್ಲಿ ದೆಹಲಿ ಕಡೆಗೆ ತೆರಳುತ್ತಿರುವುದು ಪೊಲೀಸರಿಗೆ ತಿಳಿದುಬಂದಿದ್ದು, ವಡೋದರಾ ಪೊಲೀಸರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.
24 ಗಂಟೆಗಳೊಳಗೆ ಬಂಧನ
ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗೆ, ಸೆ.29ರಂದು ಗುಜರಾತ್‌ನ ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ಸಂಪೂರ್ಣವಾಗಿ ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತರನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳಲ್ಲಿ ಆರೋಪ
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ಅಮನ್ ಸೋನಿ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇರುವುದಾಗಿ ತಿಳಿದುಬಂದಿದೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಬಂಧಿತ ಆರೋಪಿಗಳು:
- ಅರ್ಮಾನ್ ಖಾನ್ ಅಮನ್ ಸೋನಿ (34) – ಶೋಕಿನ್ ಅವರ ಪುತ್ರ, ಗೋಕುಲ್ ಪುರಿ, ಈಶಾನ್ಯ ದೆಹಲಿ.
- ಸಂಜೀವ್ ಕುಮಾರ್ @ ಜಾನಿ (34) – ವಿಷ್ಣು ಜಾಟ್ ಅವರ ಪುತ್ರ, ಸುಲ್ತಾನ್ ಪುರಿ, ನವದೆಹಲಿ.

