ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ನ. 30ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ; ಪುತ್ತೂರಿನಿಂದ ಬಸ್ ವ್ಯವಸ್ಥೆ

0
9

ಪುತ್ತೂರು : ರೈತರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶದ ವತಿಯಿಂದ ನವೆಂಬರ್ 30ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರೈತ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ.

ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿರುವ ಈ ಪ್ರತಿಭಟನಾ ಸಭೆಯಲ್ಲಿ ಪುತ್ತೂರು ತಾಲೂಕು ಸಮಿತಿ ಹಾಗೂ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ರೈತರು ಭಾಗವಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವವರ ಅನುಕೂಲಕ್ಕಾಗಿ ಪುತ್ತೂರಿನಿಂದ ಎಕ್ಸಿಕ್ಯೂಟಿವ್ ಕ್ಲಾಸ್ ಬಸ್ ವ್ಯವಸ್ಥೆ ಮಾಡಲಾಗಿದೆ.

ನವೆಂಬರ್ 29ರ ರಾತ್ರಿ 9.30ಕ್ಕೆ ಪುತ್ತೂರಿನಿಂದ ಬಸ್ ಹೊರಡಲಿದ್ದು, ಮರುದಿನ ಬೆಳಿಗ್ಗೆ ಬೆಂಗಳೂರಿಗೆ ತಲುಪಲಿದೆ. ಪ್ರತಿಭಟನೆಯಲ್ಲಿ ಕಾಡುಪ್ರಾಣಿಗಳಿಂದ ರೈತರಿಗೆ ಉಂಟಾಗುತ್ತಿರುವ ತೊಂದರೆ, ರೈತರ ಕೋವಿ ನವೀಕರಣ, ಚುನಾವಣೆ ಸಂದರ್ಭದಲ್ಲಿ ಕೋವಿ ಠೇವಣಿ ಇಡುವ ಸಮಸ್ಯೆ, ಕಸ್ತೂರಿರಂಗನ್ ವರದಿ, ಫಸಲ್ ಭೀಮಾ ಯೋಜನೆಯ ಅವೈಜ್ಞಾನಿಕ ಪರಿಹಾರ ವ್ಯವಸ್ಥೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾಗಿರುವ ಇಟಿಎಫ್‌ಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಹಾಗೂ ರೈತರಿಗೆ ಕೈಗೆಟುಕುವ ದರದಲ್ಲಿ ನಿರಂತರವಾಗಿ ಮರಳು ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ರೈತರ ಹಲವು ಪ್ರಮುಖ ಬೇಡಿಕೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಗುತ್ತದೆ.

ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ಊಟೋಪಚಾರದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಆನೆ ಮಾಹಿತಿ ಗ್ರೂಪ್‌ನಿಂದ ಬೆಂಗಳೂರಿಗೆ ಪ್ರಯಾಣಿಸಲು 25 ಮಂದಿಗೆ ಮಾತ್ರ ಅವಕಾಶವಿರುವುದರಿಂದ ಭಾಗವಹಿಸಲು ಇಚ್ಛಿಸುವವರು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಭಾಗವಹಿಸುವಿಕೆಯನ್ನು ಖಚಿತಪಡಿಸಲು 9449901817 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.