ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬೃಹತ್ ಬಂಡೆ ಕುಸಿತ – 7 ಜೀವ ಬಲಿ

0
34

ರಾಮನಗರ : ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಗುರುವಾರ ಮುಂಜಾನೆ ಸುಮಾರು 5 ಗಂಟೆ ವೇಳೆಗೆ ಕಾವೇರಿ ಕ್ರಷರ್‌ನಲ್ಲಿ ಈ ದುರಂತ ಸಂಭವಿಸಿದೆ. ಸುಮಾರು 40 ಅಡಿ ಎತ್ತರದಿಂದ ಬೃಹತ್ ಬಂಡೆ ಕುಸಿದು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಸ್ಥಳದಲ್ಲಿ 10ರಿಂದ 15 ಬಿಹಾರ ಮೂಲದ ಕಾರ್ಮಿಕರು ಹಾಗೂ ಕೆಲ ಸ್ಥಳೀಯರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಹಿಟಾಚಿ ಯಂತ್ರದ ಮೂಲಕ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಬಂಡೆ ಕುಸಿದಿದೆ. ಘಟನಾ ಸ್ಥಳದಿಂದ ಕೇವಲ 10 ಅಡಿ ದೂರದಲ್ಲಿದ್ದ ಕಾರಣ ತಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದು ಹಿಟಾಚಿ ಆಪರೇಟರ್ ತಿಳಿಸಿದ್ದಾರೆ.

ಗಾಯಗೊಂಡ ಐವರು ಕಾರ್ಮಿಕರನ್ನು ತಕ್ಷಣವೇ ಆರ್‌.ಆರ್‌. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮೃತರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ. ದುರಂತ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೆಲಸಕ್ಕಾಗಿ ದೂರದ ಊರಿನಿಂದ ಬಂದಿದ್ದ ಕಾರ್ಮಿಕರ ಕುಟುಂಬಗಳು ಶೋಕ ಸಾಗರದಲ್ಲಿ ಮುಳುಗಿವೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಭೂ ವಿಜ್ಞಾನಿ ಕೃಷ್ಣವೇಣಿ, ಕ್ವಾರಿಗೆ ಅಗತ್ಯ ಅನುಮತಿ ಪಡೆದು ಸ್ಫೋಟ ನಡೆಸಲಾಗಿತ್ತು. ಆದರೂ ದುರಂತಕ್ಕೆ ನಿಖರ ಕಾರಣ ಏನೆಂಬುದು ಸ್ಥಳ ಪರಿಶೀಲನೆಯ ನಂತರವೇ ತಿಳಿಯಲಿದೆ ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಎಸ್.ಟಿ. ಸೋಮಶೇಖರ್, “ಈ ಹಿಂದೆ ಕೂಡ ಸುರಕ್ಷತಾ ಕ್ರಮಗಳ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು. ಆದರೂ ನಿರ್ಲಕ್ಷ್ಯ ಮುಂದುವರಿದಿದೆ. ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸ್ಥಳೀಯ ಪೊಲೀಸ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಹೊಣೆಗಾರಿಕೆಯನ್ನು ತನಿಖೆ ಮಾಡಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here