ಬಂಟ್ವಾಳ : ಮೆಲ್ಕಾರ್ ಫ್ಲೈಓವರ್ ಸಮೀಪ ವಾಹನ ತಪಾಸಣೆ ವೇಳೆ ಬಂಟ್ವಾಳ ನಗರ ಪೊಲೀಸರು ಭಾರೀ ಮಾದಕ ವಸ್ತು ಸಾಗಾಟ ಜಾಲವನ್ನು ಭೇದಿಸಿದ್ದು, ಸುಮಾರು ₹7.64 ಲಕ್ಷ ಮೌಲ್ಯದ ಎಂಡಿಎಂಎ (MDMA) ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರ ನೇತೃತ್ವದ ತಂಡ ಸಂಜೆ ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಕಾರನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳ ಬಳಿ ಮಾದಕ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾಯಿತು.
ಪೊಲೀಸರ ವಿಚಾರಣೆಯಲ್ಲಿ ಆರೋಪಿಗಳನ್ನು ಎ. ಜುಬೈರ್ (39), ಮೊಹಮ್ಮದ್ ಸವಾದ್ (36) ಹಾಗೂ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲಾಗಿದೆ.
ತಪಾಸಣೆ ವೇಳೆ ಆರೋಪಿಗಳ ಬಳಿಯಿಂದ ಹಾಗೂ ಕಾರಿನೊಳಗಿಂದ 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕ ದ್ರವ್ಯ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹7.64 ಲಕ್ಷ ಎಂದು ಅಂದಾಜಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಹೆಚ್ಚಿನ ಲಾಭದ ಉದ್ದೇಶದಿಂದ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಸಾಗಿಸುತ್ತಿದ್ದರೆಂಬ ಮಾಹಿತಿ ಬೆಳಕಿಗೆ ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಂಡಿಎಂಎ ಮಾದಕ ವಸ್ತು, ಮಾದಕ ದ್ರವ್ಯ ಸೇವನೆಗೆ ಬಳಸುವ ಸಾಧನ, ಮೂರು ಮೊಬೈಲ್ ಫೋನ್‌ಗಳು ಹಾಗೂ ಕೆಎ-19 ಎಂಆರ್-1997 ಸಂಖ್ಯೆಯ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

