ದೇವಸ್ಥಾನದ ಮುಂದೆ ಮಾಂಸದ ತುಂಡು ಬಿದ್ದಿದ್ದರಿಂದ ಭಾರೀ ಕೋಲಾಹಲ ಸೃಷ್ಟಿಯಾಗಿದ್ದ ಘಟನೆಗೆ ಇದೀಗ ಅನಿರೀಕ್ಷಿತ ತಿರುವು ಸಿಕ್ಕಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಕಿಡಿಗೇಡಿಗಳು ಮಾಂಸ ಎಸೆದಿದ್ದಾರೆ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣದಲ್ಲಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರಿಗೆ ಅಚ್ಚರಿಯ ಸಂಗತಿ ತಿಳಿದುಬಂದಿದೆ. ಮಾಂಸದ ತುಂಡನ್ನು ದೇವಸ್ಥಾನದ ಮುಂದೆ ತಂದಿಟ್ಟಿದ್ದು ಯಾವುದೇ ವ್ಯಕ್ತಿಯಲ್ಲ, ಬದಲಿಗೆ ಬೀದಿ ನಾಯಿ ಎಂಬುದು ತನಿಖೆಯಿಂದ ಬಹಿರಂಗವಾಗಿದೆ.ಈ ಘಟಣೆಯು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲಲಿ ಸಂಭವಿಸಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಗುಂಡ್ಲುಪೇಟೆ-ಚಾಮರಾಜನಗರ ಮುಖ್ಯ ರಸ್ತೆಯಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಕಳೆದ ಸೋಮವಾರ ಬೆಳಗ್ಗೆ ಈ ಘಟನೆ ನಡೆದಿತ್ತು. ಎಂದಿನಂತೆ ಬೆಳಗಿನ ಪೂಜಾ ವಿಧಿವಿಧಾನಗಳಿಗಾಗಿ ದೇವಸ್ಥಾನಕ್ಕೆ ಆಗಮಿಸಿದ ಅರ್ಚಕರು ಪ್ರವೇಶದ್ವಾರದ ಮುಂದೆ ಮಾಂಸದ ತುಂಡು ಬಿದ್ದಿರುವುದನ್ನು ಗಮನಿಸಿದ್ದರು.
ಈ ಸುದ್ದಿ ಹರಡುತ್ತಿದ್ದಂತೆ ಸ್ಥಳೀಯ ಭಕ್ತರು ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತರುವ ಉದ್ದೇಶದಿಂದ ಯಾರೋ ಕಿಡಿಗೇಡಿಗಳು ಮಾಂಸ ಎಸೆದಿದ್ದಾರೆ ಎಂದು ಆರೋಪಿಸಿ, ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು.
ಇದಲ್ಲದೆ, ದೇವಸ್ಥಾನದ ಸುತ್ತಮುತ್ತ ಗೋಮಾಂಸ ಮಾರಾಟ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಅದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಲಾಗಿತ್ತು. ಪ್ರಕರಣ ಕೋಮು ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಸಿಸಿಟಿವಿ ಪರಿಶೀಲಿಸಿದಾಗ ಬಯಲಾಯಿತು ಅಸಲಿ ಸತ್ಯ!
ಘಟನೆಯ ಗಂಭೀರತೆಯನ್ನು ಅರಿತ ಪೊಲೀಸರು ದೇವಸ್ಥಾನದ ಸುತ್ತಮುತ್ತ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಈ ವೇಳೆ ನಾಯಿಯೊಂದು ಮಾಂಸದ ತುಂಡನ್ನು ಬಾಯಿಯಲ್ಲಿ ಕಚ್ಚಿಕೊಂಡು ಬಂದು ದೇವಸ್ಥಾನದ ಎದುರು ಬಿಟ್ಟಿರುವುದು ಕಂಡುಬಂದಿದೆ. ಹೀಗಾಗಿ ದೇವಸ್ಥಾನದ ಮುಂದೆ ಮಾಂಸದ ತುಂಡು ಬಿದ್ದಿರುವುದರ ಹಿಂದೆ ಯಾವುದೇ ವ್ಯಕ್ತಿಯ ಕೈವಾಡವಿಲ್ಲ ಎಂಬುದು ತನಿಖೆಯಿಂದ ಸ್ಪಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮ
ಈ ಕುರಿತು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜು ಎಂ. ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆಯಿಂದ ಘಟನೆಗೆ ನಾಯಿಯೇ ಕಾರಣ ಎಂಬುದು ದೃಢಪಟ್ಟಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಸಾಮಾಜಿಕ ಜಾಲತಾಣಗಳಲ್ಲಿ ಘಟನೆಯ ಕುರಿತು ಪರಿಶೀಲಿಸದ ಮಾಹಿತಿ, ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹಂಚದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಸೂಚಿಸಿರುವ ಪೊಲೀಸರು, ಸುಳ್ಳು ಹಾಗೂ ಪ್ರಚೋದನಕಾರಿ ಮಾಹಿತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೊಡ್ಡ ಮಟ್ಟದ ಕೋಮು ಸಂಘರ್ಷಕ್ಕೆ ಕಾರಣವಾಗುವ ಆತಂಕ ಮೂಡಿಸಿದ್ದ ಘಟನೆ ಸಿಸಿಟಿವಿ ಪರಿಶೀಲನೆಯಿಂದಾಗಿ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಸದ್ಯ ಪರಿಸ್ಥಿತಿ ತಿಳಿಗೊಂಡಿದೆ.

