ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ನಾಗೇಂದ್ರ ಅವರು ಗುರುವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಿಗಮದ ಅಧಿಕಾರಿ ಚಂದ್ರಶೇಖರ್ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ, ಅವರು ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ ಹಗರಣವೊಂದು ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸಿದ್ದವು.
ಈ ನಡುವೆ ನಾಗೇಂದ್ರ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸೂಚಿಸಿದ್ದಾರೆ ಎಂದೂ ವರದಿಗಳಾಗಿದ್ದವು. ಆದರೆ ಸಿದ್ದರಾಮಯ್ಯ ಇದನ್ನು ನಿರಾಕರಿಸಿಕೊಂಡು ಬಂದಿದ್ದು. ಆದರೆ ಇಂದು ನಾಗೇಂದ್ರ ರಾಜೀನಾಮೆ ನೀಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮುನ್ಸೂಚನೆ ನೀಡಿದ್ದರು. ಅವರು ಮುನ್ಸೂಚನೆ ನೀಡಿದ ಬೆನ್ನಲ್ಲೇ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದಾರೆ.