ಬೆಳ್ತಂಗಡಿ : ಅತ್ಯಂತ ರಮಣೀಯ ಹಾಗೂ ವಿಶಾಲವಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸುಮಾರು 15 ಎಕರೆ ವಿಸ್ತೀರ್ಣದ ಗುರುವಾಯನಕೆರೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಶಾಸಕ ಹರೀಶ್ ಪೂಂಜ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಬೆಳ್ತಂಗಡಿ ತಾಲೂಕು ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ಕೆರೆ ಅಭಿವೃದ್ಧಿಯ ಸಮಗ್ರ ಯೋಜನೆ, ಮೂಲಸೌಕರ್ಯಗಳ ನಿರ್ಮಾಣ, ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳು, ಪರಿಸರ ಸಂರಕ್ಷಣೆ ಹಾಗೂ ಪ್ರವಾಸೋದ್ಯಮದ ದೃಷ್ಟಿಯಿಂದ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.

ಸಭೆಯಲ್ಲಿ ಕೆರೆಯ ಸೌಂದರ್ಯವನ್ನು ಉಳಿಸಿಕೊಂಡು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದು, ವಾಕಿಂಗ್ ಟ್ರ್ಯಾಕ್, ಉದ್ಯಾನವನ, ವಿಶ್ರಾಂತಿ ತಾಣಗಳು, ಬೆಳಕು ವ್ಯವಸ್ಥೆ, ಸುರಕ್ಷತಾ ಕ್ರಮಗಳು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸುವ ಬಗ್ಗೆ ಚರ್ಚೆ ನಡೆಯಿತು.
ಈ ಯೋಜನೆ ಜಾರಿಯಾದಲ್ಲಿ ಗುರುವಾಯನಕೆರೆ ಸ್ಥಳೀಯರಿಗೆ ಮನರಂಜನೆ ಹಾಗೂ ವಿಹಾರ ತಾಣವಾಗುವುದರ ಜೊತೆಗೆ ಬೆಳ್ತಂಗಡಿ ತಾಲೂಕಿನ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಹೊರಹೊಮ್ಮುವ ನಿರೀಕ್ಷೆ ವ್ಯಕ್ತವಾಗಿದೆ. ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಹರೀಶ್ ಪೂಂಜ ಅಧಿಕಾರಿಗಳಿಗೆ ಸೂಚನೆ ನೀಡಿದರು.

