ಮೂಡುಬಿದಿರೆ: ಇಲ್ಲಿನ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿರುವ ಪಡಸಾಲೆಯಲ್ಲಿ ಮೂಡುಬಿದಿರೆ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ನೂತನ ಕಛೇರಿಯು ಬುಧವಾರ ಉದ್ಘಾಟನೆಗೊಂಡಿತು.
ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಭರತ್ ಮುಂಡೋಡಿ ಕಛೇರಿಯನ್ನು ಉದ್ಘಾಟಿಸಿ ಮಾತನಾಡಿ ಚುನಾವಣಾಪೂರ್ವದಲ್ಲಿ ಕಾಂಗ್ರೆಸ್ ಆಶ್ವಾಸನೆ ನೀಡಿದಂತೆ 6 ತಿಂಗಳಿನಲ್ಲಿಯೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದೆ. ಸರಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗದೆ ಯೋಜನೆಯ ಫಲವನ್ನು ಪಡೆಯಬೇಕೆಂಬ ಉದ್ದೇಶದಿಂದ ಜಾರಿಗೆ ತರಲಾಗಿದೆ. ಈ ಯೋಜನೆಯಿಂದ ಹೊರಗುಳಿದ ಅರ್ಹರನ್ನು ಗುರುತಿಸಿ ನಂತರ ಪ್ರತೀ ತಾಲ್ಲೂಕು ಮಟ್ಟದಲ್ಲಿ ಸಮ್ಮೇಳನವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಮುಖ್ಯ ಅತಿಥಿ ಮಾಜಿ ಶಾಸಕ ಅಭಯಚಂದ್ರ ಮಾತನಾಡಿ ಸಿದ್ಧರಾಮಯ್ಯ ನೇತ್ರತ್ವದ ಸರಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು. ಪಕ್ಷ ಬೇಧ ತಾರತಮ್ಯ ಮಾಡದೆ ಎಲ್ಲರಿಗೂ ಅವಕಾಶವನ್ನು ಕಲ್ಪಿಸಿಕೊಡಿ ಎಂದ ಅವರು ಜನಪ್ರತಿನಿಧಿಗಳು ತಮಗೆ ಸಿಕ್ಕ ಅಧಿಕಾರವನ್ನು ವೈಭವದ ಜೀವನ ನಡೆಸುವುದಕ್ಕೆ ಬಳಸಿಕೊಳ್ಳದೆ ಜನಸೇವಕರಾಗಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು. ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ, ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ,ಮೂಡ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಪುರಸಭಾ ಸದಸ್ಯರಾದ ಕೊರಗಪ್ಪ, ಸುರೇಶ್ ಕೋಟ್ಯಾನ್, ಮಮತಾ ಆನಂದ್, ಮಹಿಳಾ ಕಾಂಗ್ರೆಸ್ ಮೂಡುಬಿದಿರೆ ಘಟಕದ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಬೆಳುವಾಯಿ ಗ್ರಾ.ಪಂ.ಅಧ್ಯಕ್ಷ ಸುರೇಶ್ ಕೆ.ಪೂಜಾರಿ, ಸದಸ್ಯೆ ಶುಭಾ, ಆದರ್ಶ್ ಶೆಟ್ಟಿ ಕಡಂದಲೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಾರ್ಯದರ್ಶಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು. ಮೂಡುಬಿದಿರೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ವಂದಿಸಿದರು.