ಮೂಡುಬಿದಿರೆ : ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – 2026

0
5

ಮೂಡುಬಿದಿರೆ : ಮಹಾವೀರ ಪದವಿಪೂರ್ವ ಕಾಲೇಜು, ಮೂಡುಬಿದಿರೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿರುವ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ–2026ಕ್ಕೆ ಕಾಲೇಜಿನ ಜಿ.ವಿ. ಪೈ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಡುಬಿದಿರೆ ಅಡ್ವೊಕೇಟ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ರೋಟರಿ ಕ್ಲಬ್ ಆಫ್ ಟೆಂಪಲ್ ಟೌನ್ ಮೂಡುಬಿದಿರೆಯ ಕಾರ್ಯದರ್ಶಿ ಆರ್‌ಟಿಎನ್. ಜಯಪ್ರಕಾಶ್ ಭಂಡಾರಿ, ಕಬಡ್ಡಿ ಗ್ರಾಮೀಣ ಭಾಗದ ಸಾಂಪ್ರದಾಯಿಕ ಆಟವಾಗಿದ್ದರೂ ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ಕ್ರೀಡೆಯಾಗಿದೆ. ಕಬಡ್ಡಿ ಕೇವಲ ದೈಹಿಕ ಸಾಮರ್ಥ್ಯವನ್ನು ಪರೀಕ್ಷಿಸುವ ಆಟವಲ್ಲ; ಬುದ್ಧಿವಂತಿಕೆ, ಚುರುಕುತನ ಹಾಗೂ ತಂಡದ ಸಹಕಾರದ ಮನೋಭಾವವನ್ನು ಬೆಳೆಸುವ ಕ್ರೀಡೆಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಹಿಸಿದ್ದರು. ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಿಂದಲೂ ಹಲವಾರು ಪ್ರತಿಭಾವಂತ ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಕಬಡ್ಡಿ ಆಟಗಾರ ಲೋಕನಾಥ ಬೋಳಾರ್ ಅವರು ಗ್ರಾಮೀಣ ಪ್ರದೇಶದಿಂದ ರಾಷ್ಟ್ರೀಯ ಮಟ್ಟದವರೆಗೆ ಬೆಳೆದ ಪ್ರತಿಭೆಯ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿ, ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಎಲ್ಲ ಕ್ರೀಡಾಳುಗಳಿಗೆ ಶುಭ ಹಾರೈಸಿದರು.

ಕ್ರೀಡಾಕೂಟವು ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಸುವುದರ ಜೊತೆಗೆ, ಶಿಸ್ತು, ಸಮಯಪಾಲನೆ, ತಂಡದ ಮನೋಭಾವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದು ಗಣ್ಯರು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಹಾಗೂ ಎಸ್.ಎಂ.ಸಿ. ಟ್ರಸ್ಟ್‌ನ ಕಾರ್ಯದರ್ಶಿ ಡಾ. ರಾಧಾಕೃಷ್ಣ, ತಾಲೂಕು ಕ್ರೀಡಾ ಸಂಯೋಜಕ ನವೀನ್ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್ ಹಾಗೂ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ಉಪಸ್ಥಿತರಿದ್ದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಎನ್.ಸಿ.ಸಿ. ಅಧಿಕಾರಿ ಲೆ. ವಿಜಯಲಕ್ಷ್ಮಿ ಸ್ವಾಗತಿಸಿದರು. ವಿದ್ಯಾರ್ಥಿನಿ ಮೋನಿಕಾ ಕಾರ್ಯಕ್ರಮ ನಿರೂಪಿಸಿದರು. ಪ್ರೀತಿ ವಂದಿಸಿದರು.