ಎಂಆರ್‌ಪಿಎಲ್‌ ಸ್ಫೋಟ : ಆಸ್ತಿ-ಪಾಸ್ತಿ ನಷ್ಟಕ್ಕೆ ಸೂಕ್ತ ಪರಿಹಾರ ಹಾಗೂ ಸಮಗ್ರ ತನಿಖೆಗೆ ಐವನ್ ಡಿʼಸೋಜಾ ಆಗ್ರಹ

0
15

ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಉಂಟಾಗಿರುವ ಆಸ್ತಿ-ಪಾಸ್ತಿ ನಷ್ಟ ಹಾಗೂ ಜೀವಹಾನಿಗೆ ಸಂಬಂಧಿಸಿದಂತೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿʼಸೋಜಾ ಆಗ್ರಹಿಸಿದ್ದಾರೆ.

ಸ್ಫೋಟದ ಪರಿಣಾಮವಾಗಿ ಎಂಆರ್‌ಪಿಎಲ್‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪದ ರೀತಿಯ ಅನುಭವ ಉಂಟಾಗಿದ್ದು, ಹಲವು ಮನೆಗಳು, ಕಟ್ಟಡಗಳು ಹಾಗೂ ಚರ್ಚ್ ಸೇರಿದಂತೆ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಘಟನೆಯಲ್ಲಿ ಒಬ್ಬರು ಮೃತಪಟ್ಟಿರುವ ಕುರಿತು ಮಾಹಿತಿ ದೊರೆತಿದ್ದು, ಸುತ್ತಮುತ್ತಲಿನ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನೆಯಿಂದ ಉಂಟಾಗಿರುವ ಹಾನಿಯ ಕುರಿತು ಕೂಡಲೇ ಸಮಗ್ರ ಸಮೀಕ್ಷೆ ನಡೆಸಬೇಕು. ಹಾನಿಗೊಳಗಾದ ಸಾರ್ವಜನಿಕ ಹಾಗೂ ಖಾಸಗಿ ಆಸ್ತಿ-ಪಾಸ್ತಿಗಳ ನಷ್ಟವನ್ನು ಪರಿಶೀಲಿಸಿ, ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಐವನ್ ಡಿʼಸೋಜಾ ಅವರು ಎಂಆರ್‌ಪಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ಮುಂಡ್ಕೂರು ಶ್ಯಾಮ್ ಪ್ರಸಾದ್ ಕಾಮತ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನವಿ ಮಾಡಿದ್ದಾರೆ.

ಅಲ್ಲದೆ, ಸಂಭವಿಸಿರುವ ಜೀವಹಾನಿಗೆ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಘಟನೆಯ ನಿಖರ ಕಾರಣಗಳನ್ನು ಪರಿಶೀಲಿಸುವುದರ ಜೊತೆಗೆ, ಎಂಆರ್‌ಪಿಎಲ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಸುರಕ್ಷತಾ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಸ್ಫೋಟದ ಪರಿಣಾಮವಾಗಿ ಹತ್ತಿರದ ಮನೆಗಳು, ಕಟ್ಟಡಗಳು ಹಾಗೂ ಚರ್ಚ್‌ಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ, ಹಾನಿಗೊಳಗಾದ ಎಲ್ಲಾ ಆಸ್ತಿಗಳ ಕುರಿತು ತಕ್ಷಣ ಸಮೀಕ್ಷೆ ನಡೆಸಿ ನಷ್ಟದ ಪ್ರಮಾಣವನ್ನು ನಿರ್ಧರಿಸಬೇಕು. ಅರ್ಹ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಐವನ್ ಡಿʼಸೋಜಾ ಹೇಳಿದ್ದಾರೆ.

ಜನರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಹಾಗೂ ಪರಿಣಾಮಕಾರಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.