MRPL ಸ್ಫೋಟ : ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಂಸದ ಬ್ರಿಜೇಶ್ ಚೌಟ

0
125

ಮಂಗಳೂರು : MRPL ಘಟಕದಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

MRPL ಅಧಿಕಾರಿಗಳು, ಪೊಲೀಸ್ ಆಯುಕ್ತರು, ಬಜ್ಪೆ ಪಟ್ಟಣ ಪಂಚಾಯತ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಂಸದರು ತಿಳಿಸಿದ್ದಾರೆ. ಸ್ಫೋಟದ ಬಳಿಕದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದ್ದು, ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಹಾಗೂ ಅಗತ್ಯ ಸುರಕ್ಷತಾ ಕಾರ್ಯಾಚರಣೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ತಕ್ಷಣ ಅಗತ್ಯ ವೈದ್ಯಕೀಯ ನೆರವು ಒದಗಿಸಲು ಸ್ಥಳೀಯ ಆಸ್ಪತ್ರೆಗಳು ಸನ್ನದ್ಧವಾಗಿರುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ನಡುವೆ, ಬೆಳ್ತಂಗಡಿಯಲ್ಲಿ ಪೂರ್ವನಿಗದಿಯಾಗಿದ್ದ ತಮ್ಮ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಲು ಘಟನಾ ಸ್ಥಳಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಶಾಂತವಾಗಿರಬೇಕು. ಅಧಿಕೃತ ಮಾಹಿತಿಯನ್ನು ಮಾತ್ರ ನಂಬಬೇಕು. ಯಾವುದೇ ವದಂತಿ ಅಥವಾ ತಪ್ಪು ಮಾಹಿತಿಯನ್ನು ಹರಡದೆ, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಆಡಳಿತ ಹಾಗೂ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಸಂಸದರು ಮನವಿ ಮಾಡಿದ್ದಾರೆ.

ಸ್ಫೋಟದ ನಿಖರ ಕಾರಣ, ಹಾನಿಯ ಪ್ರಮಾಣ ಹಾಗೂ ಘಟನೆಯ ಕುರಿತು ಹೆಚ್ಚಿನ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.