ಬೆಳ್ತಂಗಡಿ: ಗುರುವಾಯನಕೆರೆ ಸಮೀಪ ಅಸಹಜ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನ ಮೃತದೇಹ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇದು ಕೊಲೆ ಪ್ರಕರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಪೆರ್ನ ನಿವಾಸಿ ಯತೀಶ್ ಗೌಡ (32) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ತಾಲೂಕಿನ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಗುರುವಾಯನಕೆರೆ ಸಮೀಪದ ಅಲಾದಿಕೊಟ್ಟಿಗೆ ಬಳಿಯ ಶ್ರೀದೇವಿ ಕಾಂಪ್ಲೆಕ್ಸ್ ಆವರಣದಲ್ಲಿ ಯತೀಶ್ ಅವರ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಅಸಹಜ ಸಾವು ಎಂದು ಕಂಡುಬಂದಿದ್ದ ಪ್ರಕರಣವು, ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಹೊಸ ತಿರುವು ಪಡೆದುಕೊಂಡಿತು.
ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಯತೀಶ್ ಅವರಿಗೆ ಮೂವರು ಆರೋಪಿಗಳು ಹಲ್ಲೆ ನಡೆಸುತ್ತಿರುವ ದೃಶ್ಯಗಳು ಪತ್ತೆಯಾಗಿವೆ. ಆರೋಪಿಗಳ ಹಲ್ಲೆಯಿಂದಲೇ ಯತೀಶ್ ಮೃತಪಟ್ಟಿರಬಹುದು ಎಂಬ ಶಂಕೆಯ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ ಸಿ.ಕೆ, ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷಾ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

