ನವದೆಹಲಿ: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಮಂಜೂರಾಗಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜಾಮೀನಿಗೆ ತಡೆ ನೀಡಿದ್ದಲ್ಲದೆ, ನಾಲ್ಕು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ಚಿತ್ರದುರ್ಗ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಅಲ್ಲದೆ ಶರಣರು ಅಲ್ಲಿವರೆಗೆ ನ್ಯಾಯಾಂಗ ಬಂಧನದಲ್ಲಿರುವಂತೆ ನಿರ್ದೇಶಿಸಲಾಗಿದೆ. ಡಿ ರಾಜಪ್ಪ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸಂಬಂಧಿಸಿ ನ್ಯಾ ವಿಕ್ರಮ್ ನಾಥ್ ನೇತೃತ್ವದ ಪೀಠ ಈ ಸೂಚನೆ ನೀಡಿದೆ. ವಿಚಾರಣಾ ನ್ಯಾಯಾಲಯದ ಮುಂದೆ ಒಂದು ವಾರದೊಳಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಕರಣದ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ಶಿವಮೂರ್ತಿ ಶರಣರು ನ್ಯಾಯಾಂಗ ಬಂಧನದಲ್ಲಿರಬೇಕು. ವಿಚಾರಣಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಿದ್ದಲ್ಲಿ ಅದನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತರಬೇಕು ಎಂದು ಕೋರ್ಟ್ ತಿಳಿಸಿದೆ.