ಭ್ರಮರ ಬಹದ್ದೋರ್‌ಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ’

0
8

ಕಾಸರಗೋಡು : ಬಹದ್ದೂರ್ ಸಾಂಸ್ಕೃತಿಕ ಪ್ರತಿಷ್ಠಾನದ ಉಪಾಧ್ಯಕ್ಷೆ, ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಂಘಟಕಿ ಭ್ರಮರ ಬಹದ್ದೋರ್ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ನೀಡಲು ಆಯ್ಕೆ ಮಾಡಲಾಗಿದೆ.

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ನಡೆಯಲಿರುವ **‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’**ರ ಅಂಗವಾಗಿ ಈ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ–ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ‘ಕಾಸರಗೋಡು ದಸರಾ ರಾಷ್ಟ್ರೀಯ ಕವಿ ಸಮ್ಮೇಳನ’ ಆಯೋಜಿಸಲಾಗಿದೆ. ಶ್ರೀನಿವಾಸ್ ಬಹದ್ದೋರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ, ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್. ಅರಸ್ ಉದ್ಘಾಟಿಸಲಿದ್ದಾರೆ.

ಮೇರು ಕವಿ, ಸಾಹಿತಿ ಹಾಗೂ ಸಂಘಟಕ ಡಾ. ಜಯಪ್ಪ ಹೊನ್ನಾಳಿ, ಮೈಸೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕವಿಗೋಷ್ಠಿ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಭ್ರಮರ ಬಹದ್ದೋರ್ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ಪ್ರದಾನ ಮಾಡಿ ಗೌರವಿಸಲಾಗುವುದು.

ಸಾಹಿತ್ಯ, ಸಂಸ್ಕೃತಿ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಭ್ರಮರ ಬಹದ್ದೋರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಸರಗೋಡು ದಸರಾ ಪ್ರಧಾನ ಸಂಚಾಲಕ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಹಾಗೂ ಪಾಂಗೋಡು ಕ್ಷೇತ್ರ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.